ಬೆಂಗಳೂರು – ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಪ್ರಕರಣ ಸಂಬಂಧ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಬೆಂಗಳೂರಿನ ಚಾಮರಾಜಪೇಟೆ ಶಾಸಕ ಬಿ.ಜಡ್ ಜಮೀರ್ ಅಹಮದ್ ಖಾನ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ರದ್ದು ಪಡಿಸಿದೆ.
80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣದ ತನಿಖೆಗೆ ತಡೆ ನೀಡುವಂತೆ ಜಮೀರ್ ಅಹ್ಮದ್ ಕೋರಿದ್ದರು.ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಗುರುವಾರ ಆದೇಶ ಪ್ರಕಟಿಸಿದೆ.
ಪ್ರಕರಣ ಸಂಬಂಧ ನಡೆದಿದ್ದ ವಿಚಾರಣೆ ವೇಳೆ ಜಮೀರ್ ಪರ ವಕೀಲ ಇಸ್ಮಾಯಿಲ್ ಜಬೀವುಲ್ಲಾ, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ ಎಂದು ವಾದ ಮಂಡಿಸಿದ್ದರು.
ಇದನ್ನೂ ಓದಿ : ಅಕ್ರಮ ಹಣ ವರ್ಗಾವಣೆ ಪ್ರಕರಣ : ಇ.ಡಿ ಮುಂದೆ ಇಂದು ಜಮೀರ್ ಹಾಜರು
ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದ ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯ ಇಲ್ಲ. ಹಾಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನು ಬದ್ಧವಾಗಿದ್ದು, ತಡೆ ನೀಡಬಾರದು ಎಂದು ಮನವಿ ಮಾಡಿದ್ದರು.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಿತ್ತು. ಜಮೀರ್, ಆದಾಯ ಮೀರಿ 80 ಕೋಟಿಗೂ ಹೆಚ್ಚು ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ಆರೋಪಿಸಿತ್ತು.ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ.