ನೀಟ್ ಹಗರಣ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೋನಂ ವಾಂಗ್‌ಚುಕ್‌ಗೆ ಬೆಂಬಲ ಪ್ರತಿಭಟನೆ

ಹಗರಿಬೊಮ್ಮನಹಳ್ಳಿ,: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ನೀಟ್ ಪರೀಕ್ಷಾ ಅಕ್ರಮಗಳಿಂದ ವಂಚನೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೌಹಾರ್ದ ಕರ್ನಾಟಕ ವೇದಿಕೆ ಹಗರಿಬೊಮ್ಮನಹಳ್ಳಿ ತಾಲೂಕು ಸಮಿತಿ ಪ್ರತಿಭಟನೆ ನಡೆಸಿತು.

ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಸಮೀಪ ಶನಿವಾರ ನಡೆದ ಪ್ರತಿಭಟನೆಯಲ್ಲಿ, ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ಬೆಂಬಲ ಸೂಚಿಸಲಾಯಿತು.

ಪ್ರತಿಭಟನಾಕಾರರು ಮಾತನಾಡಿ, ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗದೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ. ಉಪವಾಸ ಸತ್ಯಾಗ್ರಹವು ಪ್ರಜಾಸತ್ತಾತ್ಮಕ ಹೋರಾಟದ ಒಂದು ರೂಪವಾಗಿದ್ದು, ಸರ್ಕಾರ ಕನಿಷ್ಠ ಮಾನವೀಯತೆ ಪ್ರದರ್ಶಿಸಿ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಸೋನಂ ವಾಂಗ್ಚುಕ್ ಆಸ್ಪತ್ರೆಗೆ ವರ್ಗಾವಣೆಗೆ ಪತ್ನಿಯಿಂದ ಹೈಕೋರ್ಟ್ ಮೊರೆ

ಸೋನಂ ವಾಂಗ್‌ಚುಕ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಅವರ ಜೀವಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ನೀಟ್ ಪರೀಕ್ಷೆಯಿಂದ ತೊಂದರೆಗೊಳಗಾದ ಸಾವಿರಾರು ವಿದ್ಯಾರ್ಥಿಗಳ ಪರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಸೋನಂ ವಾಂಗ್‌ಚುಕ್ ಅವರ ಆರೋಗ್ಯದ ಮೇಲೆ ನಿಗಾ ವಹಿಸುವಂತೆ ದೆಹಲಿ ಹೈಕೋರ್ಟ್ ಕೇಂದ್ರ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿರುವುದನ್ನು ಉಲ್ಲೇಖಿಸಿದ ಪ್ರತಿಭಟನಾಕಾರರು, ಸರ್ಕಾರ ತಕ್ಷಣ ಮಾತುಕತೆಗೆ ಮುಂದಾಗಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಅಗತ್ಯವಾದ ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದೇವದಾಸಿ ಮಹಿಳೆಯರ ವಿಮೋಚನಾ ಸಂಘಟನೆಯ ಬಿ. ಮಾಳಮ್ಮ, ಸಿಐಟಿಯುನ ಆರ್.ಎಸ್. ಬಸವರಾಜ್, ಜಗನ್ನಾಥ, ಕೆ. ಗಾಳೆಪ್ಪ, ಕೆ. ರಮೇಶ್, ಎಸ್‌ಎಫ್‌ಐ ಮುಖಂಡ ಜಯಸೂರ್ಯ, ಪಿ. ಚಾಂದ್‌ಬೀ, ಸೈಯದ್ ಇರ್ಫಾನ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ನೂರಾರು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ನೋಡಿ: ಮಫ್ತಿ ಪೊಲೀಸರ ಕಾರ್ಯಾಚರಣೆ! ಸೋನಂ ವಾಂಗ್‌ಚುಕ್‌ರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ಕೇಂದ್ರದ ವಿರುದ್ಧ ಆಕ್ರೋಶ

Donate Janashakthi Media

Leave a Reply

Your email address will not be published. Required fields are marked *