ರಾಯಚೂರು ದಲಿತ ಮಹಿಳೆಯರ ಮೇಲಿನ ಸರಣಿ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ರಾಯಚೂರು ಜಿಲ್ಲೆಯಲ್ಲಿ ದಲಿತ ಯುವಕ ಹಾಗೂ ಮಹಿಳೆಯರ ಮೇಲೆ ನಡೆದಿರುವ ಕೊಲೆ, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ದಲಿತ ಹಕ್ಕುಗಳ ಸಮಿತಿ (DHS) ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ರಾಜ್ಯದ ವಿವಿಧ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಯಚೂರು ರಾಯಚೂರು

ರಾಯಚೂರಿನಲ್ಲಿ ಇತ್ತೀಚೆಗೆ ನಡೆದಿರುವ ಭೀಮಾನಂದ ಅವರ ಕೊಲೆ, ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಎಂಬ ದಲಿತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಹಾಗೂ ಲಿಂಗಸುಗೂರು ತಾಲೂಕಿನ ಕರಡಕಲ್‌ನಲ್ಲಿ ದಲಿತ ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಬೆಂಗಳೂರಿನ ಪ್ರತಿಭಟನೆಯಲ್ಲಿ ಡಿಎಚ್‌ಎಸ್ ರಾಜ್ಯ ಮುಖಂಡರಾದ ಗೋಪಾಲಕೃಷ್ಣ ಹರಳಹಳ್ಳಿ, ಎನ್. ರಾಜಣ್ಣ ಹಾಗೂ ಡಿಎಸ್‌ಎಂಎಂ ಮುಖಂಡ ನಾಗರಾಜ ನಂಜುಂಡಯ್ಯ ಮಾತನಾಡಿದರು. ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಮುಖಂಡರಾದ ಗೌರಮ್ಮ, ಕೆ.ಎಸ್. ಲಕ್ಷ್ಮಿ ಮತ್ತು ರೇಣುಕಾ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಘಟನೆಗಳನ್ನು ಖಂಡಿಸಿದರು.

ಪ್ರಕರಣಗಳ ಕುರಿತು ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು ಹಾಗೂ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಜಿಲ್ಲಾ ಕೇಂದ್ರಗಳಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ : ದೆಹಲಿ SIR: ಅಡ್ವಾಣಿ, ಜೈಶಂಕರ್, ಚುನಾವಣಾ ಆಯುಕ್ತರಿಗೂ ನೋಟಿಸ್

ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ಅಶ್ವಿನಿ ಕುಟುಂಬಕ್ಕೆ ₹50 ಲಕ್ಷ, ಭೀಮ ನಂದ ಕುಟುಂಬಕ್ಕೆ ₹25 ಲಕ್ಷ ಹಾಗೂ ಕರಡಕಲ್ ಸಂತ್ರಸ್ತೆಗೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿ ಸಂತ್ರಸ್ತ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ಅಥವಾ ಐದು ಎಕರೆ ಕೃಷಿ ಭೂಮಿ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ದಲಿತ ಮಹಿಳೆಯರು ಹಾಗೂ ದುರ್ಬಲ ವರ್ಗಗಳ ಜನರು ತಮ್ಮದೇ ಪ್ರದೇಶಗಳಲ್ಲಿ ಭಯವಿಲ್ಲದೆ ಬದುಕುವಂತಹ ಸುರಕ್ಷಿತ ವಾತಾವರಣವನ್ನು ಸರ್ಕಾರ ನಿರ್ಮಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ, ಸರ್ಕಾರ ತುರ್ತು ಮಧ್ಯಪ್ರವೇಶ ಮಾಡುವ ಮೂಲಕ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ, ರಕ್ಷಣೆ ಮತ್ತು ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.

ದಲಿತ ಹಕ್ಕುಗಳ ಸಮಿತಿಯ ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳ ಜಂಟಿ ಆಶ್ರಯದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಜಿಲ್ಲಾ ಮುಖಂಡರಾದ ಮದೇಶ್, ರವಿಚಂದ್ರನ್, ಶಿವಕುಮಾರ್ ಹಾಗೂ ನಾಗಣ್ಣ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ನೋಡಿ : ಸೆ.22ರಿಂದ ‘ಎಸ್‌ಐಆರ್ ಪರಿಶೋಧನೆ-ಪ್ರತಿರೋಧ ಪ್ರವಾಸ’Janashakthi Media

Donate Janashakthi Media

Leave a Reply

Your email address will not be published. Required fields are marked *