ಶಾಸಕನ ವಿರುದ್ಧ ಕಿರುಕುಳದ ಆರೋಪ; ನಿಷ್ಪಕ್ಷಪಾತ ತನಿಖೆ ನಡೆಸಲು ಆಗ್ರಹ
ಚೆನ್ನೈ: ತಮಿಳುನಾಡಿನ ಕಳ್ಳಕುರಿಚಿ ಜಿಲ್ಲೆಯ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಾಸಕನ ವಿರುದ್ಧ ನ್ಯಾಯಯುತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಮಹಿಳಾ ಆಯೋಗ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಮಹಿಳಾ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ದ್ರಾವಿಡ ಮುನ್ನೇತ್ರ ಕಳಗಂ ಸಂಸದೆ ಕನಿಮೊಳಿ ಒತ್ತಾಯಿಸಿದ್ದಾರೆ. ಮಹಿಳಾ
ಕಳ್ಳಕುರಿಚಿ ಕ್ಷೇತ್ರದ ಶಾಸಕ ಅರುಳ್ ವಿಗ್ನೇಶ್ ಅವರು ಜಿಲ್ಲಾಧಿಕಾರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಹಾಗೂ ಮದ್ಯದ ಅಮಲಿನಲ್ಲಿ ಅವರ ನಿವಾಸಕ್ಕೆ ತೆರಳಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕನಿಮೊಳಿ, ಮಹಿಳಾ ಅಧಿಕಾರಿಯೊಬ್ಬರಿಗೆ ಇಂತಹ ಪರಿಸ್ಥಿತಿ ಎದುರಾಗಿರುವುದು ಆತಂಕಕಾರಿ ಎಂದು ಹೇಳಿದ್ದಾರೆ. ಮಹಿಳಾ ಅಧಿಕಾರಿಗಳ ಘನತೆ ಮತ್ತು ಸುರಕ್ಷತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿ. ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತ ಅಧಿಕಾರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಸ್ವಯಂಪ್ರೇರಿತವಾಗಿ ತನಿಖೆಗೆ ಮುಂದಾದ ಮಹಿಳಾ ಆಯೋಗ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗವು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದೆ.
ಆಯೋಗದ ಅಧ್ಯಕ್ಷೆ ವಿಜಯಾ ರಹತ್ಕರ್ ಅವರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು, ರಾಜಕೀಯ ಅಥವಾ ಇತರ ಪ್ರಭಾವಗಳಿಗೆ ಮಣಿಯದೆ ನ್ಯಾಯಸಮ್ಮತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಈ ಹಿಂದೆ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಿದ್ದ ದೂರುಗಳು ಹಾಗೂ ಅವುಗಳ ಮೇಲೆ ಕೈಗೊಂಡ ಕ್ರಮಗಳ ಬಗ್ಗೆಯೂ ಪರಿಶೀಲಿಸುವಂತೆ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದೂರವಾಣಿ ಸಂದೇಶಗಳು ಸೇರಿದಂತೆ ವಿದ್ಯುನ್ಮಾನ ಸಾಕ್ಷ್ಯಗಳನ್ನು ಸಂರಕ್ಷಿಸಿ ಪರಿಶೀಲಿಸಬೇಕು. ಕೈಗೊಂಡ ಕ್ರಮಗಳ ಕುರಿತು ಏಳು ದಿನಗಳೊಳಗೆ ವಿವರವಾದ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನೂ ಓದಿ : ಮಂಗಳೂರಿನಲ್ಲಿ ಒಂದೇ ದಿನದ ಸಚಿವ ಸಂಪುಟ ಸಭೆಗೆ ₹3.83 ಕೋಟಿ ಖರ್ಚು!
ಆರೋಪ ನಿರಾಕರಿಸಿದ ಶಾಸಕ
ಇನ್ನೊಂದೆಡೆ, ತಮ್ಮ ವಿರುದ್ಧದ ಆರೋಪಗಳನ್ನು ಶಾಸಕ ಅರುಳ್ ವಿಗ್ನೇಶ್ ನಿರಾಕರಿಸಿದ್ದಾರೆ. ಜಿಲ್ಲಾಧಿಕಾರಿಗೆ ಯಾವುದೇ ಅನುಚಿತ ಸಂದೇಶಗಳನ್ನು ಕಳುಹಿಸಿಲ್ಲ. ತಮ್ಮ ರಾಜಕೀಯ ಹೆಸರು ಕೆಡಿಸಲು ಸುಳ್ಳು ಆರೋಪಗಳನ್ನು ಹರಡಲಾಗುತ್ತಿದೆ ಎಂದು ಹೇಳಿದ್ದಾರೆ. ತಮ್ಮ ಮೇಲಿನ ಆರೋಪಗಳು ಸುಳ್ಳು ಎಂಬುದನ್ನು ಸಾಬೀತುಪಡಿಸಲು ಸಿದ್ಧವಿರುವುದಾಗಿಯೂ ತಿಳಿಸಿದ್ದಾರೆ.
ಪ್ರಕರಣದ ಆರೋಪಗಳು ಇನ್ನೂ ತನಿಖೆಗೆ ಒಳಪಟ್ಟಿವೆ. ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ. ಮಹಿಳಾ ಅಧಿಕಾರಿಗಳ ಸುರಕ್ಷತೆ, ಘನತೆ ಮತ್ತು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ಹಕ್ಕನ್ನು ರಕ್ಷಿಸಬೇಕೆಂಬ ಒತ್ತಾಯ ಈ ಬೆಳವಣಿಗೆಯೊಂದಿಗೆ ಮತ್ತೆ ಮುನ್ನೆಲೆಗೆ ಬಂದಿದೆ.
ಇದನ್ನೂ ನೋಡಿ : ಕೃಷಿಮೇಳ | ಕೃಷಿಯಲ್ಲಿ ಹೊಸ ಸಾಧ್ಯತೆಗಳ ಅನಾವರಣ: ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ Janashakthi Media
