ಬೆಂಗಳೂರು: ಪಿಎಸ್‌ಐ ಅಕ್ರಮ ಪರೀಕ್ಷೆ ಪ್ರಕರಣ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಪಿಎಸ್‌ಐ ಮರು ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸುತ್ತೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 545 ಪಿಎಸ್‌ಐ ಅಕ್ರಮ ಪರೀಕ್ಷೆ ಸಂಬಂಧ ಮರು ಪರೀಕ್ಷೆ ನಡೆಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ತಿಳಿಸಿದರು.
‘ಕೆಲವು ಅಭ್ಯರ್ಥಿಗಳು ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ಭಾಗಿಯಾದ ಎಲ್ಲರ ಆರೋಪ ಪಟ್ಟಿ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ. ಆರೋಪಿ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸ್ಮರ್ಧಾತ್ಮಕ ಪರೀಕ್ಷೆಗೆ ಅವಕಾಶ ಸಿಗದಂತೆ ಕ್ರಮ ಕೈಗೊಳ್ಳಬೇಕಿದೆ’ ಎಂದು ಹೇಳಿದರು.
ಮುಂದಿನ ತಿಂಗಳು ಚಾರ್ಜ್‌ಶೀಟ್
ಪ್ರಕರಣ ಸಂಬಂಧ ತನಿಖೆ ಮಾಡುತ್ತಿರುವ ಸಿಐಡಿ ಅಕ್ಟೋಬರ್‌ನಲ್ಲಿ ದೋಷಾರೋಪ ಪಟ್ಟಿಸಲ್ಲಿಸಲಿದೆ ಎಂದು ಹೇಳಿದ ಸೂದ್, ಸಿಐಡಿ 90 ದಿನಗಳೊಳಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿಸಲ್ಲಿಸಲಿದೆ. ಸಿಐಡಿ ತನಿಖೆ ಮುಗಿಯುವವರೆಗೂ ಮರು ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಕಾನ್ಸ್‌ಟೇಬಲ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು. ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ. ಸಿಐಡಿ ಸ್ವತಂತ್ರ ತನಿಖಾ ಸಂಸ್ಥೆಯಾಗಿರುವುದರಿಂದ ತನಿಖೆ ಬಗ್ಗೆ ಈ ಹಂತದಲ್ಲಿ ಯಾವುದೇ ಮಾಹಿತಿ ನೀಡುವುದು ಸರಿಯಲ್ಲ. ಆರೋಪಿಗಳ ವಿರುದ್ಧ ಸಾಕ್ಷ್ಯ ಸಿಗದಿದ್ದಲ್ಲಿ ಆರೋಪ ಪಟ್ಟಿಯಲ್ಲಿ ಅವರ ಹೆಸರು ಸೇರಿಸಲು ಸಾಧ್ಯವಿಲ್ಲ. ಹೀಗಾಗಿ ಈ ಹಂತದಲ್ಲಿ ಯಾರ ಬಗ್ಗೆಯೂ ಮಾತನಾಡುವುದು ತಪ್ಪಾಗಲಿದೆ ಎಂದು ಪ್ರತಿಕ್ರಿಯಿಸಿದರು.