ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಸರ್ಕಾರವು ಆಚರಣೆ ಸಂಬಂಧಿಸಿದ ಪೂರ್ವಭಾವಿ ಸಿದ್ದತೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ನಾಳೆ ಸಂಜೆ ವಿಧಾನಸೌಧದ ಮುಂಭಾಗ ನಡೆಯುವ ಸಮಾರಂಭದಲ್ಲಿ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ವೇದಿಕೆ ನಿರ್ಮಾಣ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ರಜನಿಕಾಂತ್, ಜೂನಿಯರ್ ಎನ್ಟಿಆರ್, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಮುಂತಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಂಜೆ 4 ಗಂಟೆಗೆ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಬೆಂಗಳೂರಿನ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರೆ, ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಹಾಗೂ ವಿಧಾನ ಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೌರವ ಉಪಸ್ಥಿತಿ ಇರಲಿದೆ. ಕಂದಾಯ ಸಚಿವ ಆರ್. ಅಶೋಕ್ ಹಾಗೂ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಅವರ ಘನ ಉಪಸ್ಥಿತಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಸೇರಿದಂತೆ ಹಲವರು ಅತಿಥಿಗಳಾಗಿ ಆಗಮಿಸುತ್ತಿದ್ದಾರೆ.
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ರಾಜ್ ಕುಟುಂಬ ಸದಸ್ಯರು, ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ.
ಪುನೀತ್ ರಾಜ್ಕುಮಾರ್ಗೆ ನೀಡಲಾಗುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಬೆಳ್ಳಿಯ ಸ್ಮರಣಿಕೆ, 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿರಲಿದೆ.
ಬಿಗಿ ಪೊಲೀಸ್ ಭದ್ರತೆ
ವಿಧಾನಸೌಧದಲ್ಲಿ ನಾಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಇರುವುದರಿಂದ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಆರ್. ಶ್ರೀನಿವಾಸಗೌಡ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. 7 ಎಸಿಪಿ, 16 ಇನ್ಸ್ಪೆಕ್ಟರ್, 25 ಪಿಎಸ್ಐ, 300 ಕಾನ್ಸ್ಟೆಬಲ್, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 6 ತುಕಡಿಗಳ ನಿಯೋಜನೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಸುಮಾರು 20 ಸಾವಿರ ಜನ ಸೇರುವ ಸಾಧ್ಯತೆಯಿದೆ. ವಿಧಾನಸೌಧದ ಎದುರು ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗುತ್ತದೆ. ಚಿತ್ರರಂಗದವರು, ಬೆಂಗಳೂರು ನಾಗರಿಕರು ಸೇರಿ 5 ಸಾವಿರ ಜನರಿಗೆ ಪಾಸ್ಗಳನ್ನು ವಿತರಿಸಲಾಗುತ್ತಿದೆ.
ನವೆಂಬರ್ 1ರ ಸಂಜೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳ ಪ್ರದಾನ ಸಮಾರಂಭವು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಅದ್ಭುತ ಸಮಾರಂಭದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಸರ್ಕಾರಿ ಸೇರಿದಂತೆ ಇತರೆ ಸಂಘ-ಸಂಸ್ಥೆಗಳಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಬೇಕೆಂದು ಕರೆ ನೀಡಿರುವ ಮುಖ್ಯಮಂತ್ರಿ ಎಲ್ಲೆಲ್ಲಿಯೂ ಕನ್ನಡದ ಧ್ವಜ ಹಾರಾಡಬೇಕು. ಈ ಮೂಲಕ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕೆಂದು ತಿಳಿಸಿದರು.