ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅನುಮತಿ ನಿರಾಕರಣೆ – ಸಿದ್ದರಾಮಯ್ಯ ಕಿಡಿ

Please follow and like us:
ಬೆಂಗಳೂರು: ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿರುವ ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದು, “ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ” ಎಂದು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಕೂಡ ಕೇಂದ್ರ ಸರ್ಕಾರ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿತ್ತು. ಆದರೆ ಕೇಂದ್ರದ ಈ ನಡೆ ರಾಜ್ಯದಾದ್ಯಂತ ಆಕ್ರೋಶ ಹುಟ್ಟುಹಾಕಿದ ನಂತರ ತನ್ನ ನಿರ್ಧಾವನ್ನು ಪರಿಶೀಲಿಸಿ ಸ್ತಬ್ಧಚಿತ್ರಕ್ಕೆ ಅನುಮತಿ ನೀಡಿತ್ತು. “ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ” ಎಂದು ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೆಆರ್‌ಎಸ್ ಅಣೆಕಟ್ಟಿನ ಸುತ್ತ ಗಣಿಗಾರಿಕೆ ನಿಷೇಧ ಹೇರಿದ ಹೈಕೋರ್ಟ್

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು” ಎಂದು ಹೇಳಿದ್ದಾರೆ.

ಅದಾಗ್ಯೂ ಕೇಂದ್ರದ ಆಯ್ಕೆ ಸಮಿತಿಯು ಸರ್ಕಾರದ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಹಾರ | ರೈಲ್ವೇ ಭೂಮಿ ಹಗರಣ ಮೊದಲ ಚಾರ್ಜ್ ಶೀಟ್‌ನಲ್ಲಿ ರಾಬ್ರಿ ದೇವಿ ಮತ್ತು ಮಗಳ ಹೆಸರು!

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ” ಎಂದು ಅವರು ಹೇಳಿದ್ದಾರೆ.

“ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.
ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು” ಎಂದು ಸಿದ್ದರಾಮಯ್ಯ ಅವರು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ವಿಡಿಯೊ ನೋಡಿ: ಹೆಂಚುಗಳು ನಿರ್ಮಾಣವಾಗುವುದು ಹೇಗೆ? ಅದರ ಹಿಂದಿರುವ ಕಾರ್ಮಿಕರ ಶ್ರಮ ಎಂತದ್ದು? ಈ ವಿಡಿಯೋ ನೋಡಿ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *