ನವದೆಹಲಿ: ಮಂಗಳವಾರ 22 ಏಪ್ರಿಲ್ ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದೂ, 12 ಮಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಸಂಬಂಧ ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ರಾಹುಲ್, ಘಟನೆಯನ್ನು ಖಂಡಿಸಿದ್ದಾರೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಪೊಳ್ಳು ಹೇಳಿಕೆ ನೀಡುವ ಬದಲು ಸರ್ಕಾರ ಇನ್ನಾದರೂ ಎಚ್ಚೆತ್ತು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
ಇದನ್ನೂ ಓದಿ: ರಿಕ್ಕಿ ರೈ ಮೇಲೆ ಶೂಟೌಟ್ ಪ್ರಕರಣ – ಬರೋಬ್ಬರಿ 6 ಗನ್ ಸೀಜ್ ಮಾಡಿದ ಬಿಡದಿ ಪೊಲೀಸರು
ತಮ್ಮ ಎಕ್ಸ್ ಖಾತೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿ, ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಭಯೋತ್ಪಾದನೆಯ ವಿರುದ್ಧ ಇಡೀ ದೇಶ ಒಗ್ಗಟ್ಟಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಪೊಳ್ಳು ಹೇಳಿಕೆ ನೀಡುವ ಬದಲು, ಸರ್ಕಾರ ಈಗಲೇ ಹೊಣೆ ಹೊತ್ತುಕೊಂಡು ಮುಂದಿನ ದಿನಗಳಲ್ಲಿ ಇಂತಹ ಅನಾಗರಿಕ ಘಟನೆಗಳು ಸಂಭವಿಸದಂತೆ ಮತ್ತು ಅಮಾಯಕ ಭಾರತೀಯರು ಈ ರೀತಿ ಪ್ರಾಣ ಕಳೆದುಕೊಳ್ಳದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ನೋಡಿ: ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ಮೃತದೇಹ Janashakthi Media