ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಚೇತರಿಕೆಯಾಗಿದ್ದು, ಹಲವೆಡೆ ಉತ್ತಮ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೆರಡು ದಿನ ರಾಜ್ಯದ ಒಳನಾಡಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದೆ.
ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದೆ. ಗಾಳಿ ಮಳೆಗೆ ಮರದ ಕೊಂಬೆಗಳು ಮುರಿದು ಬಿದ್ದಿವೆ. ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬಹಳಷ್ಟು ಕಡೆಗಳಲ್ಲಿ ಆಗಿದೆ. ಬೆಂಗಳೂರಿನ ಬಹುತೇಕ ಬಡಾವಣೆಗಳಲ್ಲಿ ಮಳೆಯಾಗಿದೆ. ಒಂದೆರಡು ಕಡೆ ಭಾರೀ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಮಳೆಯಿಂದಾಗಿ ಸಂಚಾರ ದಟ್ಟಣೆಯೂ ಉಂಟಾಗಿತ್ತು.ಕಳೆದ ಒಂದು ವಾರದಿಂದ ರಾಜ್ಯದ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾಗುತ್ತಿದ್ದು, ಭಾನುವಾರದಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಇದರಿಂದ ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಭೂಮಿ ಹದ ಮಾಡಿಕೊಳ್ಳಲು ಅನುಕೂಲವಾಗಿದೆ. ಹಾಗೆಯೇ ಪೂರ್ವ ಮುಂಗಾರು ಬೆಳೆಗಳಾದ ತಂಬಾಕು, ಅಲಸಂದೆ, ಎಳ್ಳು, ಜೋಳ ಮೊದಲಾದ ಬೆಳೆಗಳ ಬಿತ್ತನೆಗೂ ಅನುಕೂಲವಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯೆತೆಗಳು ಹೆಚ್ಚಾಗಿವೆ. ಕೆಲವೆಡೆ ಬಿರುಗಾಳಿ, ಆಲಿಕಲ್ಲು ಮಳೆಯಾಗವ ಸಂಭವವೂ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇನ್ನೆರಡು ದಿನ ಒಳನಾಡಿನಲ್ಲಿ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ. ರಾಜ್ಯದ ಒಳನಾಡಿನಲ್ಲಿ 30-35 ಮಿ.ಮೀ.ನಷ್ಟು ಮಳೆಯಾಗುವ ಲಕ್ಷಣಗಳಿವೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲ್ಬುರ್ಗಿ, ಬೀದರ್, ಯಾದಗಿರಿ , ಚಾಮರಾಜನಗರ, ಕೊಳ್ಳೆಗಾಲ, ಗುಂಡ್ಲುಪೇಟೆ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಇದನ್ನೂ ಓದಿ : ರಾಜ್ಯದಲ್ಲಿ ವಾರಾಂತ್ಯದಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮದಿಂದ ಕರ್ನಾಟಕ ಹಾಗೂ ಆಂದ್ರಪ್ರದೇಶದ ಕೆಲವು ಕಡೆಗಳಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಎರಡು ದಿನದ ನಂತರ ಮಳೆ ಮಧ್ಯೆ ಬಿಡುವು ಕೊಡಲಿದ್ದು, ವಾರಾಂತ್ಯದ ಬಳಿಕ ರಾಜ್ಯದಲ್ಲಿ ಮತ್ತೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ.