ಬೆಂಗಳೂರು : ಹೃದಯಾಘಾತಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು. ಅವರಿಗೆ ಇಂದು ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮೊನ್ನಯಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು. ಈ ವೇಳೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದಾರೆ.
ನಾಳೆ ಸಕಲ ಸರ್ಕಾರಿ ಗೌರವದೊಂದಿಗೆ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.