ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣೆ ಕೇಂದ್ರ: ಡಾ.ಕೆ.ಸುಧಾಕರ್

  • ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರ


ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

‘ಕೇಂದ್ರ ಸರ್ಕಾರದ ಸೂಚನೆಯಂತೆ ಈ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯ ಕೋವಿಡ್ ಕಾರ್ಯಪಡೆ ಸಭೆ ಸೇರಿ ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಕ್ರಮಗಳನ್ನು ಕೈಗೊಂಡಿದೆ. ಲಸಿಕೆ ವಿತರಣೆ ಕೇಂದ್ರಗಳಲ್ಲಿ ಲಸಿಕೆ ವಿತರಿಸಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಯನ್ನು ಗುರುತಿಸಲಾಗಿದೆ’ ಎಂದೂ ಸಚಿವರು ತಿಳಿಸಿದ್ದಾರೆ.

‘ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಕುರಿತು ಮಾಹಿತಿ ದಾಖಲಿಸಲಾಗಿದೆ. ಶೇ 80ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ನೀಡಿವೆ. ಇನ್ನೂ ಶೇ 20ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ’ ಎಂದು ಅವರು ಹೇಳಿದ್ದಾರೆ.

‘ರಾಜ್ಯದಲ್ಲಿ ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಶೀಘ್ರ ಲಸಿಕೆ ವಿತರಿಸಲು ಸಾಧ್ಯವಾಗುವಂತೆ, ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ. ಈ ಕೇಂದ್ರಗಳಿಗೆ ವಾಕ್ ಇನ್ ಕೂಲರ್, ವಾಕ್ ಇನ್ ಫ್ರೀಜರ್ ಕೂಡ ನೀಡುವ ಪ್ರಸ್ತಾಪವಿದೆ’ ಎಂದು ಸಚಿವರು ತಿಳಿಸಿದ್ದಾರೆ.

‘ರಾಜ್ಯದಲ್ಲಿ 10 ವಾಕ್ ಇನ್ ಕೂಲರ್ ಮತ್ತು 4 ವಾಕ್ ಇನ್ ಫ್ರೀಜರ್ ಇದೆ. ಕೇಂದ್ರ ಆರೋಗ್ಯ ಸಚಿವಾಲಯ 3 ವಾಕ್ ಇನ್ ಕೂಲರ್, 2 ವಾಕ್ ಇನ್ ಫ್ರೀಜರ್ ನೀಡಲಿದೆ. ಇದಕ್ಕಾಗಿ ಸಿವಿಲ್ ಕಾಮಗಾರಿ ಆರಂಭವಾಗಿದೆ. ಕೋಲ್ಡ್ ಸ್ಟೋರೇಜ್ ಮತ್ತು ಸಂಗ್ರಹಕ್ಕೆ ಸಂಬಂಧಿಸಿದಂತೆ, ಡೋಸ್‌ಗಳು ಮತ್ತಿತರ ಮಾಹಿತಿ ಅಗತ್ಯವಿದೆ. ಈ ಮಾಹಿತಿಯನ್ನು ಶೀಘ್ರ ಒದಗಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕೋರಲಾಗಿದೆ. ಲಸಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಡ್ರೈ ಸ್ಟೋರೇಜ್ ಬಗ್ಗೆಯೂ ನಿರ್ಧಾರ ಕೈಗೊಳ್ಳಬೇಕಿದೆ’ ಎಂದು ಸಚಿವರು ಹೇಳಿದ್ದಾರೆ.

‘ಕೇಂದ್ರ ಸರ್ಕಾರ ಈಗಾಗಲೇ ಡೀಪ್ ಫ್ರೀಜರ್ ಹಾಗೂ ರೆಫ್ರಿಜರೇಟರ್ ಗಳನ್ನು ಮಂಜೂರು ಮಾಡಿದೆ. ಹೆಚ್ಚುವರಿ ಅಗತ್ಯಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಪಶು ಸಂಗೋಪನೆ ಇಲಾಖೆಯಲ್ಲಿ ಲಭ್ಯವಿರುವ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ. ಕಾರ್ಪೊರೇಟ್ ಖಾಸಗಿ ಆಸ್ಪತ್ರೆಗಳ ಕೋಲ್ಡ್ ಸ್ಟೋರೇಜ್ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ’ ಎಂದೂ ಅವರು ವಿವರಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *