ಬೆಳಗಾವಿ: ರಾಜ್ಯದ ಎಲ್ಲೆಡೆ ಸರಿಸುಮಾರು ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಪಂಚಾಯಿತಿವಾರು ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಸದನದಲ್ಲಿ ತಿಳಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಸ್ಸಿ-ಎಸ್ಟಿ ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಮನೆ ಹಂಚಿಕೆಗೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಹೇಳಿದರು.
ಇದಲ್ಲದೇ, ಪಂಚಾಯತಿ ವಾರು ಮನೆಗಳ ಅವಶ್ಯಕತೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ.ಈ ಸಮೀಕ್ಷಾ ವರದಿ ಜನವರಿ ಅಂತ್ಯದ ವೇಳೆಗೆ ಕೈಸೇರಲಿದ್ದು, ಆನಂತರದಲ್ಲಿ ಮನೆ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
2022ರ ಡಿಸೆಂಬರ್ ವೇಳೆಗೆ ಬರೋಬ್ಬರಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು. ಜೊತೆಗೆ, ಬುಡಕಟ್ಟು ಸಮುದಾಯದವರಿಗೂ ಸೂರು ಕಲ್ಪಿಸಲಾಗುವುದು ಎಂದು ಹೇಳಿದರು.