ರಾಜ್ಯದಲ್ಲಿ ಮತ್ತೊಂದು ಜಿಲಿಟೆನ್ ದುರಂತ: 6 ಜನ ಕಾರ್ಮಿಕರ ಸಾವು

ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಮತ್ತೊಂದು ದುರಂತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್‌ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದ್ದು, ದುರಂತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಪೆರೇಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಭ್ರಮರವಾಸಿನಿ ಕ್ರಷರ್ ನಿಂದ ಸರಿಸುಮಾರು ಒಂದೂವರೆ ಕಿಲೋಮೀಟರ್ ದೂರದ ಅರಣ್ಯಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಅಪರೇಟರ್ ಗಂಗಾಧರ್, ವೇಯರ್ ಮುರುಳಿ ಹಾಗೂ ವಾಚ್ ಮೆನ್ ಮಹೇಶ್ ಸೇರಿದಂತೆ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಇದನ್ನೂ ಓದಿಶಿವಮೊಗ್ಗದಲ್ಲಿ ನಿಗೂಢ ಸ್ಪೋಟ : 15 ಮಂದಿ ಸಾವು

ಟಾಟಾ ಏಸ್ ಚಾಲಕ ರಿಯಾಜ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಟಾಟಾ ಏಸ್ ಹಾಗೂ ಒಂದು ಬೈಕ್ ಮೂಲಕ ಭ್ರಮರವಾಸಿನಿ ಕ್ರಷರ್ ನಿಂದ ಒಂದು ಕಿಲೋಮೀಟರ್ ದೂರದ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹಾಗೂ ಎಲೆಕ್ಟ್ರಿಕ್ ಡಿಟೋನೇಟರ್ಸ್ ಹೊತ್ತು ತರಲು ಮುಂದಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಅಡಗಿಸಿದ್ದ ಸ್ಫೋಟಕಗಳನ್ನ ಹೊತ್ತು ತರುವ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದ್ದು, ಪರಿಣಾಮ ಐದು ಮಂದಿಯ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಛಿಧ್ರ ಛಿದ್ರವಾಗಿ ಮೃತದೇಹಗಳೆಲ್ಲಾ ನೂರಾರು ಮೀಟರ್ ವರೆಗೂ ಚೆಲ್ಲಾಪಿಲ್ಲಿಗಳಾಗಿವೆ.

ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಡಿಯೋ ನೋಡಿ: ಶಿವಮೊಗ್ಗದಲ್ಲಿ ಬಾರೀ ಸ್ಪೋಟ 16 ಸಾವು

ಸ್ಪೋಟ ಸ್ಥಳಕ್ಕೆ ಸಚಿವ ಸುಧಾಕರ ಭೇಟಿ :  ಘಟನೆ ಸಂಬಂಧ ಸ್ಥಳಕ್ಕೆ ಆರೋಗ್ಯ  ಸಚಿವ ಸುಧಾಕರ, ADGP, IGP ಸೇರಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಈ ವೇಳೆ ಮಾತನಾಡಿದ ಎಡಿಜಿಪಿ ಪ್ರತಾಪ್ ರೆಡ್ಡಿ ಅವರು, ಈ ಘಟನೆಯ ಹಿಂದಿರುವ ತಪ್ಪಿತಸ್ಥರ ವಿರುದ್ಧ ಕಠಿನಕ್ರಮ ಕೈಗೊಳ್ಳಲಾಗುವುದು. ಕಲ್ಲು ಕ್ವಾರೆ ಗಣಿಗಾರಿಕೆಗಳಲ್ಲಿ ಸ್ಫೋಟಕಗಳನ್ನು ಬಳಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಹಲವು ನೀತಿ ನಿಯಮಗಳು ರೂಪುಗೊಂಡಿವೆ. ಅದರಂತೆ ಕಲ್ಲು ಕ್ವಾರೆ ಸೇರಿದಂತೆ ಗಣಿಗಾರಿಕೆಗಳಲ್ಲಿ ಸ್ಫೋಟಕಗಳನ್ನು ಬಳಸುವವರು ಸರ್ಕಾರದ ಅನುಮತಿ ಪಡೆದು ನಿಯಮಕ್ಕನುಸಾರವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಅನಧಿಕೃತ ಕ್ವಾರೆಗಳು ಕಂಡು ಬಂದರೆ ಪೊಲೀಸ್ ಇಲಾಖೆ ಕ್ರಿಮಿನಲ್ ಆಕ್ಷನ್‌ ತೆಗೆದುಕೊಳ್ಳುತ್ತದೆ ಎಂದರು.

ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಪ್ರತಿಕ್ರೀಯಿಸಿದ್ದಾರೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸರಕಾರವನ್ನು ಆಗ್ರಹಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *