ತುಮಕೂರು: ಇದುವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ಎರಡು ವಸತಿ ಕಾಲೇಜುಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಶಾಲೆಗಳಿಗೆ ಬೇರೆ ಕಡೆಗಳಿಂದ ವಿದ್ಯಾರ್ಥಿಗಳು ಬಂದಿದ್ದರಿಂದ ಕೊರೊನಾ ಪತ್ತೆಯಾಗಿದೆ. ಪೋಷಕರು ಆತಂಕಪಡುವ ಅಗತ್ಯವಿಲ್ಲ. ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದರು.
ರಾಜ್ಯದಲ್ಲಿ 48 ಸಾವಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿದ್ದು, ಯಾವ ಶಾಲೆಯಲ್ಲೂ ಮಕ್ಕಳಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿರುವಂತೆ ಆರೋಗ್ಯದ ಬಗ್ಗೆಯೂ ಗಮನ ಹರಿಸಲಾಗಿದೆ. ನಿರಂತರವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಂದ ಶಿಕ್ಷಣ ಇಲಾಖೆ ವರದಿ ಪಡೆದುಕೊಳ್ಳುತ್ತಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ಜತೆಗೂ ಹಂಚಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ಕೋವಿಡ್ ನೆಗಟಿವ್ ರಿಪೋರ್ಟ್ ತರುವುದು ಕಡ್ಡಾಯವಾಗಿದೆ. ಸದ್ಯಕ್ಕೆ ಶಾಲೆಗಳಿಗೆ ರಜೆ ನೀಡುವ ಪ್ರಮೇಯವಿಲ್ಲ. ಓಮಿಕ್ರಾನ್ ಹೊಸ ವೈರಾಣು ಎನ್ನುವುದು ರಾಜ್ಯದಲ್ಲಿ ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲವೆಂದು ಹೇಳಿದರು.
ತಾಂತ್ರಿಕ ಸಲಹಾ ಸಮಿತಿ ನಿರ್ಣಯ ಕೈಗೊಂಡರೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದ ಅವರು, ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪೊಷಕರು ಸಹ ಕೋವಿಡ್ ಮುಂಜಾಗ್ರತಾ ಕ್ರಮವಹಿಸುವಂತೆ ಮನವಿ ಮಾಡಿದರು.
ಧಾರವಾಡ ವೈದ್ಯಕೀಯ ಕಾಲೇಜು, ಬೆಂಗಳೂರಿನ ವಸತಿ ಶಾಲೆಯಲ್ಲಿ ಕೋವಿಡ್ ದೃಢಪಟ್ಟಿದೆ. ಭಾನುವಾರ ಮೈಸೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿವೆ. ಅದು ಬಿಟ್ಟರೆ ಪ್ರಾಥಮಿಕ ಶಾಲೆಗಳ ಹಂತದಲ್ಲಿ ಎಲ್ಲೂ ವರದಿಯಾಗಿಲ್ಲ. ಸಾಕಷ್ಟು ತಾಲ್ಲೂಕುಗಳಲ್ಲಿ ದೃಡೀಕೃತ ಪ್ರಕರಣಗಳು ಶೂನ್ಯಕ್ಕೆ ಇಳಿದಿದೆ. ಎಲ್ಲವನ್ನೂ ಪ್ರತಿ ದಿನವೂ ಗಮನಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಆರೋಗ್ಯಕ್ಕೆ ಒತ್ತು ನೀಡಿದ್ದು, ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ಇದೆ. ತಾಂತ್ರಿಕ ಸಲಹಾ ಸಮಿತಿ ಮೇಲ್ವಿಚಾರಣೆಯಲ್ಲಿ ಶಾಲೆಗಳು ನಡೆಯುತ್ತಿದೆ. ಸಲಹಾ ಸಮಿತಿ ಸೂಚನೆ ನೀಡಿದರೆ ಮುಖ್ಯಮಂತ್ರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದರು.