ಬೆಂಗಳೂರು: ಕಳೆದ 2 ವಾರಗಳಿಂದ ನಗರದಲ್ಲಿ ಕಡಿಮೆಯಾಗಿದ್ದ ಮಳೆಯ ಆರ್ಭಟ 2-3 ದಿನಗಳಿಂದ ಮತ್ತೆ ಜೋರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈ ತಿಂಗಳ ಆರಂಭದಿಂದಲೇ ಮಳೆ ಜೋರಾಗಿದ್ದು, ಆದರೆ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆ ಹೆಚ್ಚಾಗಲಿದೆ. ಬೆಂಗಳೂರು ನಗರದಲ್ಲಿಯೂ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಮಳೆಯಾಗಿದ್ದು, ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತವಾಗಿದ್ದವು. ಇಂದು ಸಹ ಮಳೆ ಬೀಳುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನೆರಡು ದಿನ ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವುದರಿಂದ ಬಿಬಿಎಂಪಿಯಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ.
ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್‌ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್‌ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.
ಅತ್ತ ಉತ್ತರ ಭಾರತದಲ್ಲೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್ನಲ್ಲಿ 4 ದಿನ ಅಂದರೆ ಸೆ. 24ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯ ಕೇರಳದಲ್ಲಿಯೂ ಸೆಪ್ಟೆಂಬರ್ 23ರಂದು ವಿಪರೀತ ಮಳೆಯಾಗಲಿದೆ.
ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ್, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಸಿಕ್ಕಿಂ, ಕೇರಳ, ಮೇಘಾಲಯ, ಬಿಹಾರ, ಲಕ್ಷದ್ವೀಪ, ತೆಲಂಗಾಣದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.