ಬೆಂಗಳೂರು: ಕರ್ನಾಟಕದ ಜಲಜೀವನ್ ಮಿಷನ್ ಯೋಜನೆಯನ್ನು ಅತೀ ಶೀಘ್ರದಲ್ಲಿ ನಿಗದಿತ ಅವಧಿಯೊಳಗೇ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ಹಾಗೂ ನೀರು ಪೂರೈಕೆ ಕಾರ್ಯಕ್ರಮಗಳನ್ನು ಮುಗಿಸಲು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರಾಜ್ಯ ಸರಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ʻಜಲಜೀವನ್ ಮಿಷನ್ ಯೋಜನೆʼಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನು ಓದಿ: ಸಚಿವ ಮುರುಗೇಶ್ ನಿರಾಣಿ ಭೇಟಿ ಮಾಡಿ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡಿದ ಸಂಸದೆ ಸುಮಲತಾ
ರಾಜ್ಯದಲ್ಲಿ ಕೈಗೊಂಡಿರುವ ‘ಜಲಜೀವನ್ ಮಿಷನ್ ಯೋಜನೆ’ ಪ್ರಗತಿಯ ಕುರಿತು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ “ರಾಜ್ಯದಲ್ಲಿ 91.19 ಲಕ್ಷ ಗ್ರಾಮೀಣ ಕುಟುಂಬಗಳಿಗೆ ತಲಾ 55 ಎಲ್‌ಪಿಸಿಡಿ ಶುದ್ಧ ನೀರು ಒದಗಿಸುವ ಗುರಿ ಇದೆ. ಯೋಜನೆಯಡಿ 2021-2022ನೇ ಆರ್ಥಿಕ ವರ್ಷದಲ್ಲಿ 25.17 ಲಕ್ಷ ಮನೆಗಳಿಗೆ ಕ್ರಿಯಾತ್ಮಕ ಕೊಳಾಯಿ ಸಂಪರ್ಕ ಒದಗಿಸಲು ಯೋಜಿಸಲಾಗಿದೆ. 2022-2023 ರಲ್ಲಿ 27.15 ಲಕ್ಷ ಹಾಗೂ 2023 ಡಿಸೆಂಬರ್ ಅಂತ್ಯದ ವೇಳೆಗೆ 10.72 ಲಕ್ಷ ಮನೆಗಳಿಗೆ ಕೊಳಾಯಿ ಸಂಪರ್ಕಿಸಲು ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.
ದೇಶದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ 2024ರ ವೇಳೆಗೆ ಒಟ್ಟು 18.93 ಕೋಟಿ ಗ್ರಾಮೀಣ ಪ್ರದೇಶದ ಮನೆಗಳಲ್ಲಿ 15.70 ಕೋಟಿ ಮನೆಗಳಿಗೆ ನೀರಿನ ಕೊಳಾಯಿ ಸಂಪರ್ಕವನ್ನು ಕಲ್ಪಿಸಲು ಯೋಜಿಸಲಾಗಿದೆ. ಈ ಯೋಜನೆಯಡಿ ಕೇವಲ ಸೌಲಭ್ಯ ಕಲ್ಪಿಸುವುದು ಮಾತ್ರವಲ್ಲ, ನಿರಂತರವಾಗಿ ಕುಡಿಯುವ ನೀರು ಒದಗಿಸುವುದು ಸರಕಾರದ ಆದ್ಯತೆಯಾಗಿದೆʼʼ ಎಂದು ಗಜೇಂದ್ರ ಸಿಂಗ್ ಶೇಖಾವತ್ ಮಾಹಿತಿ ನೀಡಿದರು.
ರಾಜ್ಯದ ಆದ್ಯತಾ ಜಿಲ್ಲೆಗಳಾದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಿಗೆ ನೀರಿನ ಕೊಳಾಯಿ ಸಂಪರ್ಕಗಳನ್ನು ಆದ್ಯತೆಯ ಮೇರೆಗೆ ಒದಗಿಸಬೇಕು ಮತ್ತು ನೀರಿನ ಗುಣಮಟ್ಟವನ್ನೂ ಖಾತರಿ ಪಡಿಸಬೇಕು ಎಂಬ ಮಾಹಿತಿಗಳು ಬಂದಿದೆ.
ರಾಯಚೂರು ಜಿಲ್ಲೆಗೆ 2000 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಯೋಜನೆ ರೂಪಿಸಲಾಗಿದ್ದು, ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿಯೂ ಬಹುಗ್ರಾಮ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆಗೆ ಮಾಹಿತಿ ನೀಡಿದರು.
ಇದನ್ನು ಓದಿ: ಮೇಕೆದಾಟು ಯೋಜನೆಯಲ್ಲಿ ಎನ್‌ಜಿಟಿ ರಾಜ್ಯದ ಪರವಾಗಿಯೇ ಆದೇಶ ನೀಡಿದೆ: ಬಸವರಾಜ ಬೊಮ್ಮಾಯಿ
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ರಾಜ್ಯದ ನೀರಾವರಿ ಯೋಜನೆಗಳ ಮಾಹಿತಿ ಬಗ್ಗೆ ಚರ್ಚೆ
ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಜಲಸಂಪನ್ಮೂಲ ಸಚಿವರೊಂದಿಗೆ ಮೇಕೆದಾಟು ಯೋಜನೆಯ ಬಗ್ಗೆಯೂ ವಿಷಯ ಪ್ರಸ್ತಾಪಿಸಿದರು ಎಂಬ ಅಂಶ ತಿಳಿದು ಬಂದಿದೆ.
ರಾಜ್ಯದ ನೀರಾವರಿ ಯೋಜನೆಗಳ ಪ್ರಗತಿಯ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಬಿ. ಎಸ್ ಯಡಿಯೂರಪ್ಪ ಅವರು ಕೃಷ್ಣಾ ಯೋಜನೆಗೆ ನೊಟಿಫಿಕೇಶನ್ ಹೊರಡಿಸುವುದು, ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸುವುದು. ಕಳಸಾ ಬಂಡೂರಿ ಯೋಜನೆಗೆ ಕೇಂದ್ರದ ಅಂತಿಮ ಹಂತದ ಕಾರ್ಯರೂಪದ ಬಗ್ಗೆ, ಎತ್ತಿನ ಹೊಳೆ ಯೋಜನೆಗಳ ಕುರಿತು ಚರ್ಚಿಸಲಾಗಿದೆ ಎಂದರು.
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಹ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಮೇಕೆದಾಟು ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ ಕೇಂದ್ರ ಮಟ್ಟದಲ್ಲಿ ಸಭೆ ಕರೆಯಲಾಗುವುದು ಎಂದರು. ಮೇಕೆದಾಟು ಬಗ್ಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿರುವ ಬಗ್ಗೆ ಕೇಂದ್ರ ಸಚಿವರು ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರದ ಪಾತ್ರ ಏನಿದೆಯೋ ಅದನ್ನು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಪಕ್ಷ ಬೇರೆ, ಸರ್ಕಾರ ಬೇರೆಯಾದರೂ ಸರ್ಕಾರದ ಪಾತ್ರ ಏನಿರುತ್ತದೆಯೋ ಅದನ್ನೇ ಮಾಡುವುದು ಎಂದು ಮಾರ್ಮಿಕವಾಗಿ ತಿಳಿಸಿದರು. ತಮಿಳುನಾಡು ರಾಜ್ಯ ಸರ್ಕಾರ ಏನೇ ನಿರ್ಣಯ ತೆಗೆದುಕೊಳ್ಳಲಿ, ಕೇಂದ್ರ ಸರ್ಕಾರ ಏನು ನಿರ್ಧಾರ ಮಾಡಬೇಕೋ ಅದನ್ನು ಮಾಡುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.