ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನಾಳೆ ಅಧಿಕೃತವಾಗಿ ಜನತಾ ದಳ ಜಾತ್ಯತೀತ-ಜೆಡಿ(ಎಸ್) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೇರ್ಪಡೆಯೊಂದಿಗೆ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಜೆಪಿ ಭವನದಲ್ಲಿ ನಾಳೆ(ಏಪ್ರಿಲ್ 17) ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ನಾಯಕರು, ಮುಖಂಡರ ಸಮ್ಮುಖದಲ್ಲಿ ಇಬ್ರಾಹಿಂ ಸೇರ್ಪಡೆ ಕಾರ್ಯ ನಡೆಯಲಿದೆ.
ಇದನ್ನು ಓದಿ: ಪರಿಷತ್ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ: ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ
ಇದಕ್ಕೂ ಮುನ್ನ ಶಾಸಕ ಎಚ್.ಕೆ.ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಏಪ್ರಿಲ್ 17 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ ಬಳಿಕ ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದರು.
ಇದನ್ನು ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸಿ.ಎಂ. ಇಬ್ರಾಹಿಂ
ಸಿಎಂ ಇಬ್ರಾಹಿಂ ಅವರು ಜೆಡಿಎಸ್‌ನ ಆಸ್ತಿಯಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಸಿ.ಎಂ.ಇಬ್ರಾಹಿಂ ಅವರೊಂದಿಗೆ ಕೈಜೋಡಿಸುವುದಾಗಿ ತಿಳಿಸಿದರು.
ರಾಜ್ಯಧ್ಯಕ್ಷ ಸ್ಥಾನ ಬಿಟ್ಟುಕೊಡುವ ಹೆಚ್.ಕೆ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಾಗಿ ದೇವೇಗೌಡರು ಘೋಷಿಸಿದ್ದಾರೆ.