ರಾಮನಗರ : ಧ್ರುವನಾರಾಯಣ ನಿಧನದ ಹಿನ್ನೆಲೆ ಪ್ರಜಾಧ್ವನಿ ಯಾತ್ರೆ ರದ್ದು

ರಾಮನಗರ : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ನಿಧನ ಹೊಂದಿರುವ ಹಿನ್ನೆಲೆ ರಾಮನಗರದಲ್ಲಿ ಇಂದು ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯನ್ನು ರದ್ದು ಮಾಡಲಾಗಿದೆ.

ರಾಮನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯ ವಿವಿಧೆಡೆ ಸಮಾವೇಶಗಳ ಆಯೋಜನೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು, ಈ ಪ್ರಜಾಧ್ವನಿ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರರು ಪಾಲ್ಗೊಳ್ಳಬೇಕಿತ್ತು. ಆದರೆ ಧ್ರುವ ನಿಧನರಾದ ಹಿನ್ನೆಲೆ ಯಾತೆಯನ್ನು ರದ್ದುಗೊಳಿಸಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌  ಅವರು ಇಂದು ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧೃವ ನಾರಾಯಣ್ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ : ರಾಮನಗರ : ಧ್ರುವ ನಿಧನದ ಹಿನ್ನೆಲೆ ಪ್ರಜಾಧ್ವನಿ ಯಾತ್ರೆ ರದ್ದು

1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.  2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧ್ರುವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.

ಸಿಎಂ ಬೊಮ್ಮಾಯಿ ಸಂತಾಪ ಸೂಚನೆ :
ಧ್ರುವ ನಾರಾಯಣ್‌ ನಿಧನ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದು, ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ.

ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಟ್ವೀಟ್‌ ಮಾಡಿದ್ದಾರೆ.

———–

ಧ್ರುವ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ :
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ.

ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ. ಎಂದು ಟ್ವೀಟ್‌ ಮಾಡುವ ಮೂಲಕ ಅಗಲಿದ ಗೆಳೆಯನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

————–

ಧ್ರುವನಾರಾಯಣ್ ಅತ್ಯಂತ ಸ್ನೇಹಶೀಲ ವ್ಯಕ್ತಿ, ವಿಭಿನ್ನ ರಾಜಕಾರಣಿ :
ಮಾಜಿ ಮುಖ್ಯಮಂತ್ರಿ  ಹೆಚ್‌ಡಿಕುಮಾರಸ್ವಾಮಿ  ಅವರು ಟ್ವೀಟ್‌ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ.
ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ.

ಶ್ರೀ ಆರ್.ಧ್ರುವನಾರಾಯಣ ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *