ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮೇ 28 ಬುಧವಾರದಂದು ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು.
ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಜಿಲ್ಲಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಲು ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿತನ ಬಂಧನ
ಈ ಬಗ್ಗೆ ಸಮಗ್ರ ಅವಲೋಕನ ನಡೆಸಲು ಮೇ 30, 31 ರಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ಕಾಳಜಿ ಕೇಂದ್ರಗಳು :ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ/ಭೂಕುಸಿತಕ್ಕೆ ಗುರಿಯಾಗುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಕಾಳಜಿ/ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗನ್ನು ಗುರುತಿಸಲಾಗಿದೆ.
ಮೇ 26 ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿವೆ. 1,385 ಮನೆಗಳು ಭಾಗಶಃ ಹಾನಿಯಾಗಿದ್ದು, ಅದರಲ್ಲಿ ಶೇ.99 ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿ ಮಾಡಲಾಗಿದೆ. ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ. ಖಾತೆಯಲ್ಲಿ 97,351.95 ಲಕ್ಷ ರೂ.ಗಳ ಅನುದಾನವಿರುತ್ತದೆ ಎಂಬ ಮಾಹಿತಿ ನೀಡಲಾಗಿದೆ.
ಇದನ್ನೂ ನೋಡಿ: ಪಿಚ್ಚರ್ ಪಯಣ 159 | ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೂರು ಸಿನಿಮಾಗಳತ್ತ ಒಂದು ನೋಟ