ಮಹಿಳಾ ಸಚಿವರೇ ಇಲ್ಲದ ಸಂಪುಟಕ್ಕೆ ಸೌಮ್ಯಾ ರೆಡ್ಡಿ ಅಸಮಾಧಾನ: ಮಹಿಳಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಮಹಿಳಾ ಸಚಿವರನ್ನು ನೇಮಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ನ ಗಮನ ಸೆಳೆದಿದ್ದಾರೆ.

ಸೌಮ್ಯಾ ರೆಡ್ಡಿ ಅವರು 2026ರ ಆಗಸ್ಟ್‌ 20ರಂದೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದರು. ಸುಮಾರು ಎರಡು ತಿಂಗಳ ಬಳಿಕ ಈ ಬೆಳವಣಿಗೆ ಬಹಿರಂಗವಾಗಿದೆ.

ತಾವು ಮಹಿಳಾ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯನ್ನು ಎರಡು ವರ್ಷಗಳ ಅವಧಿಯ ಜವಾಬ್ದಾರಿಯಾಗಿ ಸ್ವೀಕರಿಸಿದ್ದೆ. ಆ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡಲು ರಾಜೀನಾಮೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಇದರ ಜೊತೆಗೆ, ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಸ್ಥಾನ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಎಸ್ಸಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದಲ್ಲೂ ಅಕ್ರಮದ ಆರೋಪ: 6 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಂಸದೀಯ ಸಮಿತಿ ತರಾಟೆ

ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಮಹಿಳೆಯರ ಆರೋಗ್ಯ, ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಕೆಲಸ ಮಾಡಿದ್ದಾಗಿ ಸೌಮ್ಯಾ ರೆಡ್ಡಿ ತಿಳಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಬದಲಾವಣೆ ತಂದಿರುವುದನ್ನು ತಾವು ಕಂಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹೊಸ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಹುದ್ದೆಯಿಂದ ಹಿಂದೆ ಸರಿದರೂ ಕಾಂಗ್ರೆಸ್‌ ಕಾರ್ಯಕರ್ತೆಯಾಗಿ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ಹಾಗೂ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡುವ ವಿಚಾರ ಮತ್ತೆ ಚರ್ಚೆಗೆ ಬಂದಿರುವ ಸಂದರ್ಭದಲ್ಲಿ ಸೌಮ್ಯಾ ರೆಡ್ಡಿ ಅವರ ರಾಜೀನಾಮೆ ಬೆಳವಣಿಗೆ ನಡೆದಿದೆ. ರಾಜ್ಯ ಕಾಂಗ್ರೆಸ್‌ ನಾಯಕತ್ವ ಮತ್ತು ಹೈಕಮಾಂಡ್‌ ಈ ಬೇಡಿಕೆಗೆ ಯಾವ ರೀತಿಯಲ್ಲಿ ಸ್ಪಂದಿಸುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ನೋಡಿ : 19 ವರ್ಷ ದುಡಿದರೂ ಖಾಯಂ ಇಲ್ಲ! ನ್ಯಾಯ ಕೇಳಿದ ವಿಶೇಷಚೇತನರ ಮೇಲೆ ಪೊಲೀಸರ ದಬ್ಬಾಳಿಕೆ? Janashakthi Media

Donate Janashakthi Media

Leave a Reply

Your email address will not be published. Required fields are marked *