– ಉಪಚುನಾವಣೆ ಗೆಲ್ಲಲು ಅಡ್ಡದಾರಿ ಹಿಡಿದಿರುವ ಬಿಜೆಪಿ: ಕಾಂಗ್ರೆಸ್
ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣೆಗೆ ಮುನಿರತ್ನ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಉಪ ಚುನಾವಣೆ ವೇಳೆ ಮತದಾರರಿಗೆ ಆಮಿಷವನ್ನು ಬಿಜೆಪಿ ಅಭ್ಯರ್ಥಿ ವೊಡ್ಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅಕ್ರಮವಾಗಿ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ. ತಲಾ 5 ಸಾವಿರ ರೂ. ನೀಡಿ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುನಿರತ್ನ ಅವರು ಹಣ ಮತ್ತು ಉಡುಗೊರೆಗಳ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಆದ್ದರಿಂದ, ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.