ಇಲಾಖಾಧಿಕಾರಿಗಳು ಸಕಾಲದಲ್ಲಿ ಸೇವೆ ಒದಗಿಸಿ : ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು
ಗದಗ ಜ. 30 : ಸಕಾಲ ಯೋಜನೆಯ ಅನುಷ್ಟಾನದಲ್ಲಿ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಲು ಎಲ್ಲ ಅಧಿಕಾರಿಗಳು ನಿಗದಿಪಡಿಸಿದ ಅವಧಿಯಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ವಿಲೇ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಕಾಲ ಯೋಜನೆಯ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಕಾಲದಲ್ಲಿ ಅರ್ಜಿ ಸ್ವೀಕರಿಸುವಾಗ ಅರ್ಜಿಯ ಜೊತೆಗೆ ನಿಗದಿಪಡಿಸಿದ ದಾಖಲಾತಿಗಳ ಸಮೇತ ಸ್ವೀಕರಿಸಬೇಕು. ಸ್ವೀಕರಿಸಿದ ಅರ್ಜಿಗಳನ್ನು ವಿಳಂಬ ಮಾಡದೇ ನಿಗದಿತ ಅವಧಿಯೊಳಗೆ ಅರ್ಜಿ ನೀಡಿದವರಿಗೆ ಸೌಲಭ್ಯ ಒದಗಿಸಬೇಕು ಎಂದರು.
ಸಕಾಲ ಯೋಜನೆಯಡಿ ಇಲಾಖೆಗಳಿಗೆ ನಿಗದಿಪಡಿಸಿದ ಯೋಜನೆಗಳಲ್ಲಿ ಕಡ್ಡಾಯವಾಗಿ ಅರ್ಜಿಗಳನ್ನು ಸ್ವೀಕರಿಸಬೇಕು. ವಿನಾಕಾರಣ ಸ್ವೀಕರಿಸಿದ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು. ಹಾಗೂ ಸ್ವೀಕರಿಸಿದ ಅರ್ಜಿಗಳಿಗೆ ಕಾಲಮಿತಿಯೊಳಗೆ ವಿಲೇ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ಸಕಾಲ ಯೋಜನೆಯಡಿ ಜಿಲ್ಲೆಯು ಉತ್ತಮ ರ್ಯಾಂಕಿಂಗ್ ಗಳಿಸಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.
ಸಕಾಲ ಯೋಜನೆಯನ್ನು ಪ್ರತಿದಿನ , ಪ್ರತಿ ವಾರ, ಪ್ರತಿ ಮಾಹೆವಾರು ರಾಜ್ಯಾದ್ಯಂತ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದ್ದು ಅಧಿಕಾರಿಗಳು ಈ ಕುರಿತು ಹೆಚ್ಚು ನಿಗಾ ವಹಿಸುವ ಮೂಲಕ ಸಕಾಲ ಯೋಜನೆಯನ್ನು ಯಶಸ್ವಿಗೊಳಿಸುವುದರೊಂದಿಗೆ ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸಬೇಕೆಂದು ತಿಳಿಸಿದರು. ಸಕಾಲದಲ್ಲಿ ಸ್ವೀಕರಿಸಿದ ಅರ್ಜಿಗಲನ್ನು ನಿಗದಿಪಡಿಸಿದ ವೇಳೆಯಲ್ಲಿ ವಿಲೇವಾರಿ ಮಾಡದಿದ್ದಲ್ಲಿ ಇಲಾಖೆಯ ಅಧಿಕಾರಿಗಳೇ ಹೊಣೆಗಾರರಾಗುತ್ತೀರಿ. ಹಾಗೂ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ. ಕಾರಣ ಅದಕ್ಕೆ ಅವಕಾಶ ನೀಡದೇ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯನಿರ್ವಹಿಸುವಂತೆ ಸೂಚಿಸಿದರು.
ಇಲ್ಲಿಯವರೆಗೆ ಸಕಾಲ ಯೋಜನೆಯಡಿ 36,229 ಅರ್ಜಿಗಳು ಸ್ವೀಕೃತವಾಗಿದ್ದು 1,606 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, 589 ಅರ್ಜಿಗಳು ನಿಗದಿಪಡಿಸಿದ ದಿನಾಂಕಕ್ಕಿಂತ ವಿಳಂಬವಾಗಿ ವಿಲೇ ಮಾಡಲಾಗಿದೆ ಎಂದು ಸಕಾಲ ಕಾರ್ಯಕ್ರಮದ ನೋಡಲ್ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್ ಎ, ಆಯುಷ್ ಅಧಿಕಾರಿ ಡಾ. ಸುಜಾತಾ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ನಗರಸಭೆ ಪೌರಾಯುಕ್ತ ರಮೇಶ ಜಾಧವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
ವರದಿ: ದಾವಲಸಾಬ ತಾಳಿಕೋಟಿ