ಬೆಂಗಳೂರು: ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಕಠಿಣ ಸೂಚನೆ ನೀಡಿದೆ.
ಈ ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ. ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜಿನ ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.
ಸಮವಸ್ತ್ರ ಸಂಹಿತೆ ವಿಚಾರದಲ್ಲಿ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಇಲಾಖೆ ಮತ್ತು ಪಿಯು ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು ಶಿಕ್ಷಣ ಸಂಸ್ಥೆಗಳಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.
ಈ ವಿಚಾರ ಪ್ರಸ್ತುತ ನ್ಯಾಯಾಲಯದಲ್ಲಿದೆ. ಅಡ್ವೊಕೇಟ್ ಜನರಲ್ ಅವರೊಂದಿಗೆ ಮುಖ್ಯಮಂತ್ರಿ ಚರ್ಚಿಸಿದ್ದಾರೆ. ಕಾನೂನು ತಜ್ಞರ ಸಲಹೆ ಪಡೆದು ಮುಂದುವರಿಯಬೇಕಿದೆ. ಸರ್ಕಾರದ ನಿಲುವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅಡ್ವೊಕೇಟ್ ಜನರಲ್ಗೆ ಸೂಚಿಸಿದ್ದಾರೆ. ಹೈಕೋರ್ಟ್ ತೀರ್ಪು ಬರುವವರೆಗೆ ಸಮವಸ್ತ್ರ ಸಂಹಿತೆ ಪಾಲಿಸಬೇಕು ಎನ್ನುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸುತ್ತೇವೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಸ್ಕಾರ್ಫ್ ವಿಚಾರದಲ್ಲಿ ಬಾಂಬೆ, ಕೇರಳ ಹೈಕೋರ್ಟ್ಗಳು ಈಗಾಗಲೇ ತೀರ್ಪು ನೀಡಿವೆ. ಶಾಲೆಗಳಿಗೆ ಸ್ಕಾರ್ಪ್ ಧರಿಸಿ ಬರಬಾರದು ಎಂದೇ ಹೇಳಿವೆ. ಶಾಲಾ ಕಾಲೇಜು ಸೋದರತ್ವ ಬೆಳೆಸಲು ಪೂರಕವಾಗಬೇಕು. ಮಕ್ಕಳು ಶಾಲೆಗೆ ಸೇರುವಾಗ ವಸ್ತ್ರಸಂಹಿತೆಯನ್ನು ಒಪ್ಪಿ ಸಹಿ ಹಾಕಿರುತ್ತಾರೆ. ಕಳೆದ ಒಂದೂವರೆ ವರ್ಷದಿಂದ ಸಮವಸ್ತ್ರ ಧರಿಸಿ ಬಂದಿದ್ದಾರೆ. ಇದೀಗ ಕೆಲವರಿಂದ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಶಾಸಕರು ಮತ್ತು ಮುಖಂಡರ ಜೊತೆ ಚರ್ಚೆ ನಡೆಸುತ್ತೇವೆ. ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತೆ ಸುತ್ತೋಲೆ ಹೊರಡಿಸುತ್ತೇವೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದರು.