ಮೈಸೂರು: ಕೆಲವು ದಿನಗಳ ಹಿಂದೆ ಮೈಸೂರು ರಂಗಾಯಣದಲ್ಲಿ ಪ್ರದರ್ಶಿಸಲಾದ ಡಾ. ಚಂದ್ರಶೇಖರ ಕಂಬಾರ ಅವರ ‘ಸಾಂಬಶಿವ ಪ್ರಹಸನ’ ನಾಟಕವನ್ನು ತಿರುಚಿದ್ದೂ ಅಲ್ಲದೆ, ನಾಟಕದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವಹೇಳನ ಮಾಡಿರುವುದನ್ನು ಖಂಡಿಸಿ ಜನವರಿ 10ರಂದು ಬೃಹತ್ ಪ್ರತಿಭಟನೆ ನಡೆಸಲು ಸ್ವಾಭಿಮಾನಿ ಹೋರಾಟ ಸಮಿತಿ ತೀರ್ಮಾನಿಸಿದೆ.
ಪುರಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯ ಬಳಿಕ ವಿವರಣೆ ನೀಡಿದ ಸಂಘಟಕರು, ಅಂದು ಬೆಳಿಗ್ಗೆ 10ಕ್ಕೆ ನಗರದ ಓವಲ್ ಮೈದಾನದಲ್ಲಿ ಸಮಾವೇಶಗೊಂಡು, ಖಂಡನಾ ಸಭೆಯನ್ನು ನಡೆಸಿ ಬಳಿಕ ರಂಗಾಯಣಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಇದನ್ನು ಓದಿ: ‘ಸಾಂಬಶಿವ ಪ್ರಹಸನ’ ನಾಟಕ ತಿರುಚಿ ಪ್ರದರ್ಶನ : ಪೊಲೀಸರಿಗೆ ದೂರು ನೀಡಿದ ಡಾ.ಚಂದ್ರಶೇಖರ ಕಂಬಾರ
ಈ ಹೋರಾಟದಲ್ಲಿ ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚಿನ ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಇದು ಪಕ್ಷಾತೀತವಗಿ ಸ್ವಯಂಪ್ರೇರಿತವಾಗಿ ನಡೆಯುತ್ತಿರುವ ಹೋರಾಟ. ಪ್ರಗತಿಪರ ಚಿಂತಕರು, ಸಾಹಿತಿಗಳು ಹಾಗೂ ವಿವಿಧ ಸಮಾಜಗಳ ಮುಖಂಡರು ಭಾಗಿಯಾಗಲಿದ್ದಾರೆ ಎಂದರು.
‘ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರ ನಡೆ ಕೋಮುಸಂಘರ್ಷಕ್ಕೆ ಕಾರಣವಾಗುತ್ತಿದೆ. ಸರ್ಕಾರದ ಸಂಸ್ಥೆಯಾದ ರಂಗಾಯಣವನ್ನು ತಮ್ಮ ದುರುದ್ದೇಶಕ್ಕೆ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಅಣತಿಯಂತೆ ಕಾರ್ಯಗಳನ್ನು ಮಾಡುತ್ತಿದ್ದಾರೆ’ ಎಂದು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು, ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾರಾಯಣ, ಕುರುಬರ ಸಂಘ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಮುಖಂಡರಾದ ವಾಸು, ಹರೀಶ್ ಗೌಡ, ಎಂ.ಶಿವಣ್ಣ, ಮಂಜುಳಾ ಮಾಸನ, ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ದಶೆಟ್ಟಿ ಪಾಲ್ಗೊಂಡಿದ್ದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ