- ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಇಂದು ಚರ್ಚೆ
- ಗ್ರಾಮಪಂಚಾಯಿತಿ ಚುನಾವಣೆ ಬಳಿಕ ವರಿಷ್ಠರು ನಿರ್ಧರಿಸಲಿದ್ದಾರೆ: ಅಶೋಕ್
ಚಿತ್ರದುರ್ಗ/ಕೊಡಗು: ಕಳೆದ ಮೂರು ತಿಂಗಳಿನಿಂದ ಚರ್ಚೆಯಾಗುತ್ತಿರುವ ಸಚಿವ ಸಂಪುಟ ವಿಸ್ತರಣೆ ಮೆಗಾ ಧಾರಾವಾಹಿಯಂತೆ ಎಳೆದುಕೊಂಡು ಹೋಗುತ್ತಿದೆ. ಇತ್ತ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಉರುಳಿಸಿ ಬಿಜೆಪಿಗೆ ಬಂದು ಚುನಾವಣೆಯಲ್ಲಿ ಗೆದ್ದಿರುವ ಶಾಸಕರು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದರೆ, ಹೈಕಮಾಂಡ್ ಮಾತ್ರ ಒಪ್ಪಿಗೆ ನೀಡುತ್ತಿಲ್ಲ. ಸಚಿವ ಸಂಪುಟ ವಿಸ್ತರಣೆಯನ್ನು ಅತೀ ಶೀಘ್ರದಲ್ಲಿ ಎಂದು ಹೇಳಿಕೊಂಡೇ ಬರಲಾಗುತ್ತಿದೆ. ಆದರೆ ಯಾವಾಗ ಖಚಿತವಾಗಿ ಹೇಳಲಾಗದೆ ಒಬ್ಬೊಬ್ಬ ನಾಯಕರು ಒಂದೊಂದು ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿದ್ದಾರೆ.
‘ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಇನ್ನೆರಡು ಅಥವಾ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ. ವರಿಷ್ಠರೊಂದಿಗೆ ಇಂದು ಚರ್ಚೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿತ್ರದುರ್ಗದಲ್ಲಿ ತಿಳಿಸಿದರೆ, ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಮಾತನಾಡಿದ ಅಶೋಕ್ ಗ್ರಾಮಪಂಚಾಯಿತಿ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆಯೋ ಪುನಾರಚನೆಯೋ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮುರುಘಾ ಮಠದ ಮುರುಘಾಶ್ರೀ ಮ್ಯೂಸಿಯಂ ಉದ್ಘಾಟನೆಗೆ ಭಾನುವಾರ ಆಗಮಿಸಿದ ಸಿಎಂ ಯಡಿಯೂರಪ್ಪ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಸಂಪುಟದಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ನಿರ್ಧರಿಸಲಿದ್ದಾರೆ. ಶಿವಮೊಗ್ಗ ಪ್ರವಾಸ ಮುಗಿಸಿ ಸಂಜೆ ಬೆಂಗಳೂರಿಗೆ ಮರಳಿದ ಬಳಿಕ ಸಂಪುಟ ವಿಸ್ತರಣೆ ಕಾರ್ಯದಲ್ಲಿ ಮಗ್ನನಾಗಲಿದ್ದೇನೆ ಎಂದು ಹೇಳಿದರು. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ 17 ಜನರಿಗೂ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು.
ಕೊಡಗಿನ ಪೊನ್ನಂಪೇಟೆ ತಾಲೂಕು ಉದ್ಘಾಟನೆಗೆ ಬಂದಿದ್ದ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆಯೋ ಪುನರ್ ರಚನೆಯೋ ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ. ಕಾಂಗ್ರೆಸ್‍ನಿಂದ ಬಂದವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ. ಸದ್ಯ ಗ್ರಾಮ ಪಂಚಾಯಿತಿ ಚುನಾವಣೆ ಇದೆ. ಆ ನಂತರ ಸಂಪುಟದ ಬಗ್ಗೆ ಕೇಂದ್ರ ನಾಯಕರು ನಿರ್ಧರಿಸುತ್ತಾರೆ. ಮುನಿರತ್ನ, ಶಂಕರ್ ಮತ್ತು ಎಂಟಿಬಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ. ಆತುರ ಬೇಡ ಕಾಯಿರಿ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬ ಆಗುತ್ತಿದ್ದು ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶುಕ್ರವಾರ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೋನ್ ಕರೆ ಮಾಡಿ ಸಂಪುಟ ವಿಸ್ತರಣೆ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತ ಸಿಎಂ ಬಿಎಸ್‌ವೈ ಸಂಪುಟ ವಿಸ್ತರಣೆಯ ಕುರಿತಾಗಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದರೂ ವರಿಷ್ಠರಿಂದ ಗ್ರೀನ್ ಸಿಗ್ನಲ್ ಇನ್ನೂ ದೊರಕಿಲ್ಲ.
ಬಿಜೆಪಿ ಕೆಲ ನಾಯಕರು ಅತೀ ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದರೆ ಕೆಲ ನಾಯಕರು ಗ್ರಾಪಂ ಚುನಾವಣೆ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳುತ್ತಿದ್ದಾರೆ. ಇದರಿಂದ ಯಾವಾಗ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಗೊಂದಲ ಮುಂದುವರಿಯಲಿದೆ.