ನವದೆಹಲಿ: ಬಿಲ್ಕಿಸ್ ಬಾನೊ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಸಿಟಿ ರವಿಕುಮಾರ್ ಅವರ ಪೀಠವು ಈ ವಿಷಯವನ್ನು ಮುಖ್ಯ ಅರ್ಜಿಯೊಂದಿಗೆ ಸೇರ್ಪಡೆಗೊಳಿಸಿ, ಅದರೊಂದಿಗೆ ವಿಚಾರಣೆ ನಡೆಸುದಾಗಿ ಹೇಳಿದೆ.
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆದು, ಅಂತಿಮವಾಗಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ಸಹ ವಿಧಿಸಲಾಗಿತ್ತು. ಆದರೆ, ಗುಜರಾತ್ ರಾಜ್ಯದಲ್ಲಿ ಆಡಳಿತ ಬಿಜೆಪಿ ಸರ್ಕಾರ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ಮಹಿಳಾ ಸಂಘಟನೆಯೊಂದು ಸಲ್ಲಿಸಿದ ಅರ್ಜಿಯ ವಿಚಾರಣೆಗೆ ನ್ಯಾಯಪೀಠ ಒಪ್ಪಿಕೊಂಡಿದೆ.
2002ರ ಗುಜರಾತ್ ನಲ್ಲಿ ಸಂಭವಿಸಿದ ಗೋಧ್ರಾ ಹತ್ಯಾಕಾಂಡದ ಬಳಿಕ ವ್ಯಾಪಕ ಕೋಮುಗಲಭೆ ನಡೆದಿತ್ತು. ಆ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲಿನ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಂದ ಪ್ರಕರಣದಲ್ಲಿ ಶಿಕ್ಷೆಯ ವಿನಾಯತಿ ಮತ್ತು ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ನ್ಯಾಷನಲ್ ಫೆಡರೇಶನ್ ಆಫ್ ಇಂಡಿಯನ್ ವುಮೆನ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಬಿಲ್ಕಿನ್ ಬಾನೊ ಅತ್ಯಾಚಾರಿ ಹಾಗೂ ಕೊಲೆ ಪ್ರಕರಣದ ಅಪರಾಧಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆ ಮಾಡಿದ್ದೇವೆ ಎಂದು ಗುಜರಾತ್ ಸರ್ಕಾರ ಸಮರ್ಥಿಸಿಕೊಂಡಿದೆ. 11 ಅಪರಾಧಿಗಳನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದೆ.
ಕಳೆದ ಅಕ್ಟೋಬರ್ 18ರಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ಸಂದರ್ಭದಲ್ಲಿ ಗುಜರಾತ್ ಸರ್ಕಾರ ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಇತ್ತೆಂದು ಅಫಿಡವಿಟ್ ನೀಡಿತ್ತು. ಗುಜರಾತ್ ಸರ್ಕಾರದ ಅಫಿಡವಿಟ್‌ಗೆ ಪ್ರತಿಕ್ರಿಯೆ ನೀಡುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ತಿಳಿಸಿದೆ. ಈ ಪ್ರಕರಣದ ವಿಚಾರಣೆ ನವೆಂಬರ್ 29ಕ್ಕೆ ಮುಂದೂಡಿಕೆಯಾಗಿದೆ.