ಚುನಾವಣೆ ವೇಳೆ ‘ಉಚಿತ ವಸ್ತುಗಳ ಆಶ್ವಾಸನೆ: ಕೇಂದ್ರ-ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಚುನಾವಣೆಗಳ ಸಂದರ್ಭದಲ್ಲಿ ಸಾರ್ವಜನಿಕರ ಹಣದಿಂದ ‘ಅಸಂಬದ್ಧ ಉಚಿತ ವಸ್ತುಗಳ ಕೊಡುಗೆʼಗಳನ್ನು ನೀಡುವ ಭರವಸೆ ಅಥವಾ ಹಂಚುವ ರಾಜಕೀಯ ಪಕ್ಷದ ಚಿಹ್ನೆ ಮತ್ತು ಪಕ್ಷದ ನೋಂದಣಿ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.

ಈ ಕುರಿತಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ ಚುನಾವಣಾ ಆಯೋಗಕ್ಕೆ ಬೇರೊಂದು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿತ್ತು ಆದರೆ ಚುನಾವಣಾ ಆಯೋಗ ಇಲ್ಲಿಯ ತನಕ ಒಂದು ಸಭೆ ನಡೆಸಿದೆ. ರಾಜಕೀಯ ಪಕ್ಷಗಳ ಅಭಿಪ್ರಾಯಗಳನ್ನು ಅವರು ಕೇಳಿದ್ದರು, ಆದರೆ ಸಭೆಯ ಪರಿಣಾಮ ಮಾತ್ರ ತಿಳಿದು ಬಂದಿಲ್ಲ.

ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ, ಈ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಇದೊಂದು ಗಂಭೀರ ಸಮಸ್ಯೆಯಾಗಿದ್ದು ಉಚಿತ ಕೊಡುಗೆಗಳ ಬಜೆಟ್‌ ಎಂಬುದು ಸಾಮಾನ್ಯ ಬಜೆಟ್‌ ಅನ್ನೂ ಮೀರಿಸುವಂತಿದೆ. ಇದು ಭ್ರಷ್ಟಾಚಾರವಲ್ಲದಿದ್ದರೂ ಅಸಮಾನ ವೇದಿಕೆ ಸೃಷ್ಟಿಸುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಹೇಳಿದ್ದಾರೆ.

ಅರ್ಜಿದಾರರು ಕೇವಲ ಕಾಂಗ್ರೆಸ್‌, ಶಿರೋಮಣಿ ಅಕಾಲಿದಳ ಹಾಗೂ ಎಎಪಿ ಪಕ್ಷಗಳನ್ನು ಮಾತ್ರ ಅರ್ಜಿಯಲ್ಲಿ ಪ್ರಸ್ತಾಪಿಸಿರುವ ಬಗ್ಗೆಯೂ ನ್ಯಾಯಾಲಯ ಗಮನ ಹರಿಸಿದೆ. ನೀವು ಅಫಿಡವಿಟ್‌ನಲ್ಲಿ ಇಬ್ಬರ ಹೆಸರನ್ನು ಮಾತ್ರ ಉಲ್ಲೇಖಿಸಿದ್ದೀರಿ ಎಂದು ಸಿಜೆಐ ಆಕ್ಷೇಪಿಸಿದರೆ ನ್ಯಾ. ಕೊಹ್ಲಿ ಅವರು “ನೀವು ನಿಮಗೆ ಬೇಕಾದಂತೆ ಆಯ್ಕೆ ಮಾಡಿಕೊಂಡಿದ್ದೀರಿ” ಎಂದರು.

Donate Janashakthi Media

Leave a Reply

Your email address will not be published. Required fields are marked *