ಮೋದಿ-ಯೋಗಿ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಶಿಕ್ಷಕರ ಸೂಚನೆ: ತನಿಖೆಗೆ ಆದೇಶ

ಸಿದ್ಧಾರ್ಥನಗರ: 73ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ಇಲ್ಲಿನ ಶಾಲೆಯೊಂದರ ವಿದ್ಯಾರ್ಥಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬಗ್ಗೆ ಘೋಷಣೆಗಳನ್ನು ಕೂಗಿದ್ದರು. ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರು ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ಜಿಲ್ಲೆಯ ಸೊಹ್ರಾತ್‌ಗಡದಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಜನವರಿ 26ರಂದು ನಡೆದ ಕಾರ್ಯಕ್ರಮದಲ್ಲಿ ಮಕ್ಕಳು ಘೋಷಣೆಗಳನ್ನು ಕೂಗಿದ್ದರು. ಅದರ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ಮಕ್ಕಳು ರಾಷ್ಟ್ರಗೀತೆ ಹಾಡಿದ ನಂತರ, ಶಿಕ್ಷಕರ ಸೂಚನೆ ಮೇರೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ಕೂಗಿರುವುದು ವಿಡಿಯೋದಲ್ಲಿದೆ.

ಸದ್ಯ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವ ಉತ್ತರ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಪ್ರಧಾನಮಂತ್ರಿ, ಮುಖ್ಯಮಂತ್ರಿ ಪರ ಘೋಷಣೆ ಕೂಗಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.

ʼಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆದ ಬಳಿಕ ಈ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಪ್ರಕರಣದ ತನಿಖೆ ನಡೆಸುವಂತೆ ಪ್ರಾಥಮಿಕ ಶಿಕ್ಷಣ ಅಧಿಕಾರಿಗೆ (ಬಿಎಸ್‌ಎ) ಸೂಚಿಸಿದ್ದೇವೆ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುವುದುʼ ಎಂದು ಜಿಲ್ಲಾಧಿಕಾರಿ ದೀಪಕ್‌ ಮೀನಾ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *