ಮಂಗಳೂರು: ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಕೈಗೊಂಡಿರುವ ಎನ್‌ಐಎ ಅಧಿಕಾರಿಗಳು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು(ಸೆಪ್ಟಂಬರ್ 08) ಬೆಳಿಗ್ಗೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿ ಇರುವ ರಿಯಾಜ್ ಮನೆ ಬಾಗಿಲು ತಟ್ಟಿದ ಎನ್‌ಐಎ ಅಧಿಕಾರಿಗಳು, ಕೂಡಲೇ ಮೊಬೈಲ್ ವಶಕ್ಕೆ ಪಡೆದುಕೊಂಡರು. ಬಳಿಕ ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿಸುದ್ದಾರೆ. ಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳ ಹಿಂದೆ ಪುತ್ತೂರು ಹಾಗೂ ಸುಳ್ಯ ತಾಲೂಕಿನ 32 ಕಡೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಕೊಲೆಗೆ ಸಂಬಂಧಸಿದ ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ.
ರಿಯಾಜ್ ಪರಂಗೀಪೇಟೆ ಮನೆಗೆ ದಾಳಿ ನಡೆದಿದೆ ಎಂದು ತಿಳಿಯುತ್ತಿದ್ದಂತೆಯೇ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೋ ಬ್ಯಾಕ್ ಎನ್‌ಐಎ ಘೋಷಣೆ ಕೂಗಿದ್ದಾರೆ. ಬಿ.ಸಿ.ರೋಡ್ ಬಳಿಯ ಪರ್ಲಿಯಾ ಎಂಬಲ್ಲಿನ ರಿಯಾಜ್ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಬಂಟ್ವಾಳ ಪೊಲೀಸರು ಭದ್ರತೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಜುಲೈ 26 ರಂದು ಪ್ರವೀಣ್ ನೆಟ್ಟಾರು ಅವರ ಹತ್ಯೆ ನಡೆದಿತ್ತು. ಇದರಿಂದ ತೀವ್ರ ಆಕ್ರೋಶಕ್ಕೆ ಒಳಗಾದ ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧ ತಿರುಗಿಬಿದ್ದಿದ್ದರು. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ತಾಲೂಕು ಶಾಸಕ ಸಚಿವ ಎಸ್. ಅಂಗಾರ ವಿರುದ್ಧವೂ ತೀವ್ರ ಆಕ್ರೋಶ ಹೊರಹಾಕಿದ್ದರು. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.