ಪ್ರವೇಶ ಶುಲ್ಕದ ತಾಂತ್ರಿಕ ಸಮಸ್ಯೆ ಬಗೆಹರಿಸಲು ಆಗ್ರಹ: ಎಸ್‌ಎಫ್‌ಐ ದಿಢೀರ್ ಪ್ರತಿಭಟನೆ

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳ ಪ್ರವೇಶಾತಿ ಶುಲ್ಕ ಕಡಿತದ ಆದೇಶ ಜಾರಿಯಾಗದೆ, ಯುಯುಸಿಎಂಎಸ್‌ನಲ್ಲಿ ದಂಡ ಸಹಿತ ಶುಲ್ಕವೇ ತೋರಿಸುತ್ತಿರುವ ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ಕೊಪ್ಪಳ ವಿಶ್ವವಿದ್ಯಾಲಯದ ದ್ವಿತೀಯ ಹಾಗೂ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕವನ್ನು ₹1,100 ಕಡಿತಗೊಳಿಸಿ ವಿಶ್ವವಿದ್ಯಾಲಯದ ಕುಲಪತಿಗಳು ಆಗಸ್ಟ್ 6ರಂದು ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಪ್ರವೇಶಾತಿಯ ಅಂತಿಮ ದಿನಾಂಕವನ್ನು ಆಗಸ್ಟ್ 20ರವರೆಗೆ ದಂಡರಹಿತವಾಗಿ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

ಆದರೆ ಆದೇಶ ಹೊರಡಿಸಿ ನಾಲ್ಕೈದು ದಿನ ಕಳೆದರೂ ಯುಯುಸಿಎಂಎಸ್‌ನಲ್ಲಿ ಶುಲ್ಕ ಕಡಿತದ ಪರಿಷ್ಕರಣೆ ಆಗಿಲ್ಲ. ಬದಲಾಗಿ ದಂಡ ಸಹಿತ ಶುಲ್ಕವೇ ತೋರಿಸುತ್ತಿರುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ಅವರು ಆರೋಪಿಸಿದರು.

ಶುಲ್ಕ ಪಾವತಿಸಲು ವಿದ್ಯಾರ್ಥಿಗಳು ಪ್ರತಿದಿನ ಕಾಲೇಜು ಹಾಗೂ ವಿಶ್ವವಿದ್ಯಾಲಯಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾಲಯ ಆದೇಶ ಹೊರಡಿಸಿದರೂ ಅದನ್ನು ತಾಂತ್ರಿಕ ವ್ಯವಸ್ಥೆಯಲ್ಲಿ ಜಾರಿಗೊಳಿಸದಿರುವುದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ವಿಚಾರದಲ್ಲಿ ನಿರ್ಲಕ್ಷ್ಯವಾಗಿದೆ. ಕೂಡಲೇ ಸಮಸ್ಯೆ ಪರಿಹರಿಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಡಿವೈಎಫ್‌ಐ ಉಳ್ಳಾಲ ತಾಲೂಕು ಸಮ್ಮೇಳನ: ನೂತನ ತಾಲೂಕು ಸಮಿತಿ ರಚನೆ

ಸಮಸ್ಯೆ ಪರಿಹಾರದ ಭರವಸೆ

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾಯಿ ನಗರದ ಕೊಲ್ಲಿ ನಾಗೇಶ್ವರರಾವ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಸಮಸ್ಯೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳ ಗಮನಕ್ಕೆ ತಂದು ಶೀಘ್ರ ಬಗೆಹರಿಸುವುದಾಗಿ ಭರವಸೆ ನೀಡಿದರು.

ಈಗಾಗಲೇ ಹೆಚ್ಚುವರಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು ಮರುಪಾವತಿಸಲಾಗುವುದು ಎಂದ ಅವರು, ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಬಳಿಕ ವಿದ್ಯಾರ್ಥಿಗಳು, ಸಮಸ್ಯೆ ತಕ್ಷಣ ಬಗೆಹರಿಯದಿದ್ದರೆ ತರಗತಿ ಬಹಿಷ್ಕರಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಈ ಕುರಿತು ಕಾಲೇಜಿನ ಪ್ರಾಂಶುಪಾಲರ ಮೂಲಕ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಉಪಾಧ್ಯಕ್ಷ ಶರೀಫ್ ಎಂ.ಪಿ., ಜಂಟಿ ಕಾರ್ಯದರ್ಶಿ ಬಸಯ್ಯ, ಸದಸ್ಯರಾದ ಶರಣಬಸವ, ವೆಂಕಟೇಶ್, ಲಿಂಗರಾಜ ತೆಮ್ಮಿನಾಳ್, ಲಕ್ಷ್ಮಿ, ದೀಪ, ರಂಜಿತಾ, ಉಮಾ, ಪರುಶುರಾಮ, ಬಾಲು ಗಾಣದಾಳ್, ಅಲ್ತಾಫ್, ಭಾಗ್ಯ, ಶಿವಗಂಗಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ನೋಡಿ : ರೈತ–ಕಾರ್ಮಿಕರ ಜೈಲ್‌ ಭರೋ: ಕೇಂದ್ರದ ನೀತಿಗಳ ವಿರುದ್ಧ ದೇಶಾದ್ಯಂತ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *