ಬೆಂಗಳೂರು: ಹಿಜಾಬ್ ವಿವಾದದ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ನಗರ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳ ಸುತ್ತಲೂ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕೂಡಲೇ ಜಾರಿಗೆ ಬರುವಂತೆ ಫೆಬ್ರುವರಿ 22ರವರೆಗೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ನಗರದಲ್ಲಿರುವ ಶಾಲಾ-ಕಾಲೇಜು ಹಾಗೂ ಇನ್ನಿತರ ಶೈಕ್ಷಣಿಕ ಸಂಸ್ಥೆಗಳ ಮುಂದೆ ನಾಲ್ಕು ಜನರಿಗಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಭೇಟಿ ಮಾಡಿದ ಕಮಲ್ ಪಂಥ್
ಹಿಜಬ್ ವಿವಾದದ ಹಿನ್ನೆಲೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ. ಈ ವಿವಾದದ ಬಗ್ಗೆ ಬೆಂಗಳೂರು ನಗರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿರುವ ಅವರು ಈಗಾಗಲೇ ಆಯಾ ಠಾಣಾ ವ್ಯಾಪ್ತಿಯ ಇನ್ಸ್ಪೆಕ್ಟರ್ಗಳಿಗೆ ಶಾಲಾ-ಕಾಲೇಜಿನ ಮೇಲೆ ನಿಗಾ ಇಡಲು ಸೂಚನೆ ನೀಡಿ ದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಮೀಷನರ್ ಕಮಲ್ ಪಂಥ್, ಬೆಂಗಳೂರಿನಲ್ಲಿ ಸೂಕ್ತ ಭದ್ರತೆಯನ್ನು ತೆಗೆದುಕೊಳ್ಳಲಾಗಿದೆ. ಶಾಲಾ ಕಾಲೇಜು ಬಳಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಕ್ರಮತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಗರದಲ್ಲಿ ಯಾರೂ ಕೂಡ ಗುಂಪು ಸೇರುವಂತ್ತಿಲ್ಲ. ಯಾರಾದರು ಗಲಾಟೆ ಮಾಡಿದರೆ ಅವರು ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.