ಶಿಕ್ಷಣದಲ್ಲಿ ರಾಜಕೀಯವೇಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌

ಬೆಂಗಳೂರು: ಉನ್ನತ ಶಿಕ್ಷಣ ಪಡೆಯಲು ಕರ್ನಾಟಕಕ್ಕೆ ಬಂದ ಹೊರ ರಾಜ್ಯ ವಿದ್ಯಾರ್ಥಿಗಳ ಪೈಕಿ ಕನ್ನಡ ಕಲಿಯಬೇಕೆಂಬ ಕಾರಣಕ್ಕೆ ಹಿಂದಿರುಗಿರುವರ ಸಂಖ್ಯೆ ಎಷ್ಟು ಎಂಬುದು ನಿಮಗೆ ಗೊತ್ತಿದೆಯೇ? ಏಕೆ ಶಿಕ್ಷಣದಲ್ಲಿ ರಾಜಕೀಯವನ್ನು ಬೆರಸುತ್ತೀರಿ? ಎಂದು ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕ ರಾಜ್ಯ ಸರ್ಕಾರವು ಉನ್ನತ ವ್ಯಾಸಂಗಕ್ಕಾಗಿ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳು ಕನ್ನಡ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿದೆ. ಈ ಬಗ್ಗೆ ಹೈಕೋರ್ಟ್‌ ಮುಂದೆ ರಾಜ್ಯ ಸರ್ಕಾರವು ಬಲವಾಗಿ ಸಮರ್ಥಿಸಿಕೊಂಡಿದೆ.

ರಾಜ್ಯ ಸರ್ಕಾರವು ಪದವಿ ಹಂತದಲ್ಲಿ ಕನ್ನಡ ಭಾಷಾ ಅಧ್ಯಯನವನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯದ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವಾ ಟ್ರಸ್ಟ್‌, ವ್ಯೋಮಾ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಅರ್ಜಿ ಕುರಿತು ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ವಾದ ಮಂಡಿಸಿದರು. ಸರ್ಕಾರಿ ವಕೀಲರು “ಉನ್ನತ ಶಿಕ್ಷಣದಲ್ಲಿ ಕೇವಲ ಆರು ತಿಂಗಳು ಆರಂಭಿಕರಿಗೆ ಕನ್ನಡ ಕಲಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸಬಹುದಾಗಿದೆ” ಎಂದರು.

ನ್ಯಾಯಪೀಠವು “ಉನ್ನತ ಶಿಕ್ಷಣಕ್ಕಾಗಿ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಕಲಿಯಬೇಕು ಎಂಬ ಅಂಶವು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಎಲ್ಲಿದೆ? ಈ ಕುರಿತ ದಾಖಲೆಯನ್ನು ನೀಡಿ. ನ್ಯಾಯಾಲಯ ಅರ್ಥಮಾಡಿಕೊಂಡಿರುವ ಪ್ರಕಾರ ಕನ್ನಡ ಕಲಿಕೆಯನ್ನು ಪ್ರೋತ್ಸಾಹಿಸಬಹುದೇ ಹೊರತು ಕಡ್ಡಾಯ ಮಾಡುವಂತಿಲ್ಲ ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಹೇಳುತ್ತದೆ” ಎಂದಿತು.

ಅರ್ಜಿದಾರರ ಪರ ವಕೀಲ ಎಸ್‌ ಎಸ್‌ ನಾಗನಂದ್‌ “ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉನ್ನತ ಶಿಕ್ಷಣ ವ್ಯಾಸಂಗದಲ್ಲಿ ಕಡ್ಡಾಯವಾಗಿ ಕನ್ನಡ ಕಲಿಯಬೇಕೆಂಬ ಅಂಶವಿಲ್ಲ. ತನಗೆ ಇಷ್ಟವಿರುವ ಯಾವುದೇ ವಿಷಯ ಅಥವಾ ಕೋರ್ಸ್ ಅನ್ನು ಅಧ್ಯಯನ ಮಾಡುವ ಸಂಪೂರ್ಣ ಸ್ವಾತಂತ್ರ್ಯ ವಿದ್ಯಾರ್ಥಿಗೆ ಇರುತ್ತದೆ” ಎಂದರು.

ಸರ್ಕಾರದ ಆಕ್ಷೇಪಣಾ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದ ನ್ಯಾಯಪೀಠವು ಸರ್ಕಾರದ ಪರ ವಕೀಲ ಪ್ರಭುಲಿಂಗ ನಾವದಗಿ ಅವರು ವಾದ ಮಂಡಿಸಲು ಅರ್ಜಿ ವಿಚಾರಣೆಯನ್ನು ನವೆಂಬರ್‌ 15(ಸೋಮವಾರ)ಕ್ಕೆ  ಮುಂದೂಡಿತು.

Donate Janashakthi Media

Leave a Reply

Your email address will not be published. Required fields are marked *