ಬೆಂಗಳೂರು ; “ನನ್ನ ಹೆಸರು ತಾನೇ ಪ್ರಸ್ತಾಪ ಮಾಡಲಿ ಬಿಡಿ. ಯಾರು ಏನು ಬೇಕಾದರೂ ಹೇಳಲಿ ಕಾನೂನು ಇದೆ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡತ್ತೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದರು.
ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರದಿಂದ ವಾಪಸ್ ಆದ ಡಿ. ಕೆ. ಶಿವಕುಮಾರ್ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಆರೋಪಗಳ ಕುರಿತು ಮಾತನಾಡಿದರು.
“ಯಾರು ಏನು ಬೇಕಾದರೂ ಹೇಳಬಹುದು. ಅದಕ್ಕೆಲ್ಲ ಪುರಾವೆಗಳು ಬೇಕು. ಅವರು ತನಿಖೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಲಿ” ಎಂದು ಡಿ. ಕೆ. ಶಿವಕುಮಾರ್ ಹೇಳಿದರು.
ಇಂದು ಬೆಳಗಾವಿಗೆ ಡಿಕೆಶಿ : ಸಿಡಿ ಗಲಾಟೆಯ ನಡುವೆಯು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ತೆರಳಲಿದ್ದಾರೆ. ಮಧ್ಯಾಹ್ನ 1.40 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಲಿರುವ ಡಿ ಕೆ ಶಿವಕುಮಾರ್, ಸಂಜೆ 6 ಗಂಟೆಗೆ ಹುಬ್ಬಳ್ಳಿಯಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6.30 ಕ್ಕೆ ಬೆಳಗಾವಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೋಳಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ.ಶಿವಕುಮಾರ್ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಸಿಡಿ ಪ್ರಕರಣಕ್ಕೆ ಶಿವಕುಮಾರ ರಮೇಶ ಜಾರಕಿಹೊಳಿ ತವರಿನಲ್ಲಿ ಹೇಗೆ ಪ್ರತಿಕ್ರಿಯಿಸುತ್ತಾರೆ? ಚುನಾವಣೆಯಲ್ಲಿ ಈ ಪ್ರಕರಣವನ್ನು ಬಳಸಿಕೊಳ್ಳಲಾಗುತ್ತದೆಯೇ? ಎನ್ನುವ ಪ್ರಶ್ನೆಗಳು ಎದ್ದಿವೆ.
ಡಿಕೆಶಿ ವಿರುದ್ಧ ಪ್ರತಿಭಟನೆ : ಇಂದು ಬೆಳಗಾವಿಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಪ್ರತಿಭಟನಾ ಬಿಸಿ ತಟ್ಟುವ ಸಾಧ್ಯತೆ ಇದೆ. ಹೌದು, ರಾಸಲೀಲೆ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಂತ್ರಸ್ತ ಯುವತಿಯ ಸಹೋದರ ನೇರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.