ಶಿವಮೊಗ್ಗ: ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಭಾರತಿ ಕಾಲೋನಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಬಜರಂಗ ದಳದ ಕಾರ್ಯಕರ್ತ ಹರ್ಷ ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್ 144) ಜಾರಿಗೊಳಿಸಲಾಗಿದೆ.
ಘಟನೆ ಹಿನ್ನೆನೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಟೈಲರಿಂಗ್ ವೃತ್ತಿ ಮಾಡಿಕೊಂಡಿದ್ದ ಹರ್ಷ ಕೆಲವು ತಿಂಗಳ ಹಿಂದೆ ಮತ್ತೊಂದು ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ಹಾಕಿದ್ದ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತನಿಗೆ ಆಗಾಗ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬದ ಮೂಲಗಳು ತಿಳಿಸಿವೆ
ಶಾಲಾ ಕಾಲೇಜುಗಳಿಗೆ ರಜೆ : ಪದವಿ ಪೂರ್ವ ಶಿಕ್ಷಣ ಇಲಾಖಾ ಉಪನಿರ್ದೇಶಕರ ಆದೇಶದಂತೆ ಇಂದು (ಫೆ.21ರಂದು) ನಗರದ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.