ಕರ್ನಾಟಕದ ಹಲವು ಕಡೆಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಮುಂದುವರಿದಿದೆ. ಬುರ್ಖಾ ಧರಿಸಿ ಕೆಲ ವಿದ್ಯಾರ್ಥಿನಿಯರು ಬರುವುದನ್ನು ಪ್ರತಿಭಟಿಸಿ ಕೇಸರಿ ಶಾಲು ಧರಿಸಿ ಕೆಲ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳನ್ನು ಪ್ರವೇಶಿಸುತ್ತಿದ್ದಾರೆ. ಈ ನಡುವೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಯ ವಿಚಾರಣೆ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ
ಹಿಜಾಬ್-ಕೇಸರಿಶಾಲು ವಿವಾದ ನೆಪವಾಗಿಟ್ಟುಕೊಂಡ ಶಿವಮೊಗ್ಗದ ಹಲವೆಡೆ ಪುಂಡರು ಕಲ್ಲುತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸಿಆರ್ಪಿಸಿ 144ರ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದು, ನಗರದ ಹಲವೆಡೆ ಕಲ್ಲುತೂರಾಟ ನಡೆದಿದೆಯಾದರೂ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ನಗರದಲ್ಲಿ ಪರಿಸ್ಥಿತಿ ಸದ್ಯ ಹತೋಟಿಯಲ್ಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದರು. ಕಾಲೇಜಿನ ಧ್ವಜಸ್ತಂಭವನ್ನು ಹತ್ತಿ ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ನಡೆದಿದೆ. ಕಾಲೇಜಿನಲ್ಲಿ ಕಲ್ಲು ತೂರಾಟ, ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಬಳಿಕ ಲಘು ಲಾಠಿ ಚಾರ್ಜ್ ಕೂಡ ಮಾಡಲಾಗಿತ್ತು. ಸ್ವತಃ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಈ ನಡುವೆಯೂ ಪೊಲೀಸರ ಮೇಲೆ ಕಲ್ಲು ತೂರಾಟ, ಕಾಲೇಜು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.
ಈ ಎಲ್ಲಾ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಹಶೀಲ್ದಾರ ನಾಗರಾಜ್ ಅವರು ಶಿವಮೊಗ್ಗದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ಅಂದರೆ, ಫೆಬ್ರವರಿ 08-09ರಂದು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.
ಹರಿಹರದಲ್ಲಿ ವಾಗ್ವಾದ
ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಿಜಾಬ್ ಮತ್ತು ಕೇಸರಿ ಶಾಲು ತೊಟ್ಟ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.
ಕೇಸರಿ ಶಾಲು ತೊಟ್ಟು ಬಂದಿದ್ದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಹಿಜಾಬ್ ಧರಿಸಿದವರು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ವಿದ್ಯಾರ್ಥಿಗಳ ಜೊತೆಗೆ ಹಲವಾರು ಜನರು ಸಹ ಕಾಲೇಜಿಗೆ ಬಂದು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಆಗ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಲಾಠಿ ತೋರಿಸಿ ವಿದ್ಯಾರ್ಥಿಗಳನ್ನು ಚದುರಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಶ್ರುವಾಯು ಸಹ ಪ್ರಯೋಗ ಮಾಡಲಾಯಿತು.
ದಾವಣಗೆರೆಯಲ್ಲಿ ಗದ್ದಲ: ಕಾಲೇಜಿಗೆ ರಜೆ
ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಹಿಜಾಬ್-ಕೇಸರಿ ಶಾಲು ಗದ್ದಲ ತಾರಕಕ್ಕೇರಿದೆ. ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ಕಾಲೇಜಿಗೆ ಒಂದು ದಿನದ ರಜೆ ಘೋಷಿಸಲಾಯಿತು. ಈ ವಿಷಯವನ್ನು ಪೊಲೀಸರೇ ಮೈಕ್ಗಳಲ್ಲಿ ತಿಳಿಸಿದರು. ಪಾಲಕರ ಸಲಹೆ ಪಡೆದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹೇಳಿದರು.
ಕೇಸರಿ ಶಾಲು, ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾಲೇಜಿಗೆ ರಜೆ ಘೋಷಣೆ ಮಾಡಲಾಯಿತು. ಪೊಲೀಸರು ಮೈಕ್ಗಳಲ್ಲಿ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.