ನವದೆಹಲಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಎಲ್ಲ ರಂಗಗಳಲ್ಲಿಯೂ ವೈಫಲ್ಯ ಅನುಭವಿಸಿದೆ ಎಂದು ಆರೋಪಿಸಿದರು.
ನವದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಕೊವಿಡ್ 19 ಅನ್ನು ಕೂಡ ಸರಿಯಾಗಿ ನಿಭಾಯಿಸದೆ ಎರಡನೇ ಅಲೆಯಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿದೆ. ಇದು ಅಭಿವೃದ್ಧಿ ಶೂನ್ಯ ಸರ್ಕಾರ, ಹಾಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತಗಳಿಸಲಿದೆ. ಸಾಮೂಹಿಕ ನಾಯಕತ್ವದ ಮೂಲಕ ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ ಎಂದರು.
ರಾಹುಲ್ ಗಾಂಧಿ ಅವರು ರಾಜ್ಯದ ಸುಮಾರು 16 ಜನ ಹಿರಿಯ ನಾಯಕರನ್ನು ದೆಹಲಿಗೆ ಕರೆದು ಸಭೆ ನಡೆಸಿ ರಾಜ್ಯದ ಸದ್ಯದ ಸ್ಥಿತಿಗತಿ, ಮುಂದೆ ನಾವು ಗೆಲ್ಲಬೇಕಾದರೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳು ಬಗ್ಗೆ ಚರ್ಚೆ, ಗೆಲ್ಲುವ ಅವಕಾಶ ಇರುವುದರಿಂದ ಎಚ್ಚರ ತಪ್ಪದೆ ಕೆಲಸ ಮಾಡಬೇಕು ಎಂಬ ಸಲಹೆ ಹಾಗೂ ಮತ್ತೆ ಅಧಿಕಾರಕ್ಕೆ ಬರಲು ಅಗತ್ಯವಿರುವ ಬೆಂಬಲ, ಸಹಕಾರವನ್ನು ತಾವು ನೀಡುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಹೈಕಮಾಂಡ್ ಗೆ ಸಂದೇಶ ಸಿಕ್ಕಂತಿದೆ. ಹಾಗಾಗಿ ಅವರು ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಇತರೆ ಎಲ್ಲಾ ನಾಯಕರು ಒಗ್ಗೂಡಿ, ಚೆನ್ನಾಗಿ ಕೆಲಸ ಮಾಡುತ್ತಿದ್ದೀರ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂಬ ಮಾಹಿತಿ ನಮಗಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಹುಲ್ ಗಾಂ ಅವರೊಂದಿಗೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕಾಂಗ್ರೆಸ್‍ನ ಎಲ್ಲ ನಾಯಕರು ಜನರ ನಡುವೆ ಇರಬೇಕು. ಹೀಗಾಗಿ ಬೆಂಗಳೂರು ಬಿಟ್ಟು ಕ್ಷೇತ್ರಗಳಿಗೆ ತೆರಳುವಂತೆ ಶಾಸಕರಿಗೆ, ಮಾಜಿ ಶಾಸಕರಿಗೆ, ಹಿರಿಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದರು.
ಮೇಕೆದಾಟು ಪಾದಯಾತ್ರೆ ಫೆ.27ರಿಂದ ಆರಂಭವಾಗಲಿದೆ. ಅದರಲ್ಲಿ ಭಾಗವಹಿಸುವಂತೆ ಎಲ್ಲರಿಗೂ ಮನವಿ ಮಾಡಿದ್ದೇವೆ. ನಮ್ಮ ನೀರು, ನಮ್ಮ ಹಕ್ಕು ಹೋರಾಟಕ್ಕೆ ಚಲನಚಿತ್ರರಂಗ ಸೇರಿದಂತೆ ಎಲ್ಲ ಕ್ಷೇತ್ರಗಳು ಕೈ ಜೋಡಿಸಲಿವೆ ಎಂದು ಹೇಳಿದರು.