ಬೆಳಗಾವಿ : ರಾಜ್ಯ ಸರ್ಕಾರದ ಗುಪ್ತಚರ ಇಲಾಖೆ ಸಂಪೂರ್ಣ ವೈಫಲ್ಯ ಅನುಭವಿಸಿದ್ದು, ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಳಗಾವಿಯ ಹನಗೋಳದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಖಂಡನೀಯ. ಎಂಇಎಸ್‍ನ ಪುಂಡರಿಗೆ ಕಾನೂನು ಇಲ್ಲ. ಯಾವ ನಿಯಮಗಳೂ ಇಲ್ಲ. ಆ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಜನರು ಒತ್ತಾಯ ಮಾಡಲು ಆರಂಭಿಸಿದ್ದಾರೆ. ಈ ಬಗ್ಗೆ ವಿಧಾನಮಂಡಲದಲ್ಲಿ ಚರ್ಚೆ ಮಾಡಿ ಎಂಇಎಸ್ ನಿಷೇಧ ಮಾಡಲು ಒತ್ತಡ ಹೇರುತ್ತೇನೆ ಎಂದರು.
ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ.
ಇಡೀ ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ? ಪ್ರಶ್ನಿಸಿದರು.
ಈಗ ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಅವರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಅನ್ಯಾಯವನ್ನು ಪ್ರತಿಭಟಿಸಲು ತಡೆಯಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.