ನಿಮ್ಮ ಭೇಟಿ ವಿಕಾಸಕ್ಕೊ-ವಿನಾಶಕ್ಕೊ ಉತ್ತರ ಕೊಡಿ: ಪ್ರಧಾನಿಗಳಿಗೆ ಪ್ರಶ್ನೆ ಮಾಡಿ ಸಿದ್ದರಾಮಯ್ಯ

Please follow and like us:

ಬೆಂಗಳೂರು: ಸನ್ಮಾನ್ಯ ಪ್ರಧಾನಮಂತ್ರಿಯವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿಯ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡುವ ಮೂಲಕ ಪ್ರಶ್ನಿಸಿದ್ದಾರೆ.

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು, (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ? ಎಂದಿದ್ದಾರೆ. ಅಲ್ಲದೆ, ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಅವರ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸನೋ? ವಿನಾಶನೋ? ಎಂದು ಟ್ವೀಟ್‌ ಮಾಡಿದ್ದಾರೆ.

ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್​ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925). ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931). ಪ್ರಧಾನಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಇದು ವಿಕಾಸವೋ? ವಿನಾಶವೋ ಎಂದಿದ್ದಾರೆ.

ಬಜ್ಪೆ ವಿಮಾನ ನಿಲ್ದಾಣ, ಎನ್‌ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ?.

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ ಕಟೀಲ್. ಇದು ವಿಕಾಸವೋ? ವಿನಾಶವೋ? ಎಂದು ಉಲ್ಲೇಖಿಸಿದ್ದಾರೆ.

ಜೂನ್ ತಿಂಗಳೊಂದರಲ್ಲಿ ದಕ್ಷಿಣ ಕನ್ನಡದಲ್ಲಿ ಒಂದುವರೆ ಕೋಟಿ ಬೆಲೆ ಮೌಲ್ಯದ ಮಾದಕದ್ರವ್ಯಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ?. ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ರೈತರ ಬೆಳೆಗಳು ಕೊಚ್ಚಿಹೋಗಿವೆ. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ?. ಕರಾವಳಿ ಮೀನುಗಾರರ ಮೇಲೆ ಸಿಆರ್‌ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ ಮಾಡಲಾಗಿದೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್​ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೋ? ವಿನಾಶನೋ?.

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್‌ಗೇಟ್‌ಗಳು ಸ್ಥಾಪಿಸಲಾಗಿದೆ. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ? ಇವುಗಳಿಗೆ ಉತ್ತರಿಸಿ ಎಂದು ಸಿದ್ದರಾಮಯ್ಯ ಪ್ರಶ್ನೆಗಳ ಮೇಲೆ ಪ್ರಶ್ನೆಯನ್ನು ಮೋದಿಯವರಿಗೆ ಕೇಳಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *