ಬೆಂಗಳೂರು :ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸದಾ ಟೀಕೆ ಮಾಡುತ್ತಿದ್ದ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಗುರುವಾರ ದಿಢೀರನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದ್ದು, ಸಿದ್ದರಾಮಯ್ಯ ಮತ್ತು ಹರಿಪ್ರಸಾದ್ ಸುಮಾರು ಒಂದು ವರ್ಷದ ನಂತರ ಬೆಂಗಳೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಗುರುವಾರ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಬಿಕೆ ಹರಿಪ್ರಸಾದ್ ಸುಮಾರು ಒಂದು ಗಂಟೆಗಳ ಕಾಲ ಸಿದ್ದರಾಮಯ್ಯ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ.
ಕಳೆದ ವಾರ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದ ಹರಿಪ್ರಸಾದ್, ಕೆಲವು ದಿನಗಳ ಹಿಂದೆಯಷ್ಟೇ ಪಕ್ಷದ ರಾಷ್ಟ್ರೀಯ ಮುಖಂಡರು ಬೆಂಗಳೂರಿನಲ್ಲಿ ಮಾತುಕತೆ ನಡೆಸಿ ಹೋದ ನಂತರ ಸಿದ್ದರಾಮಯ್ಯ ಅವರನ್ನು ಹರಿಪ್ರಸಾದ್ ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ.
ಮಾತುಕತೆ ವೇಳೆ ಪ್ರಸ್ತುತ ರಾಜಕೀಯ ಬೆಳವಣಿಗೆ, ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ಪರಿಣಾಮ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯ ನಂತರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಹರಿಪ್ರಸಾದ್ ಭೇಟಿಯಲ್ಲಿ ಯಾವುದೇ ವಿಶೇಷ ಇಲ್ಲ. ಉಭಯ ಕುಶಲೋಪಾರಿ ಮಾತುಕತೆ ನಡೆಸಿದ್ದೇವೆ ಅಷ್ಟೇ ಎಂದರು.
ಹರಿಪ್ರಸಾದ್ ಮಾತನಾಡಿ, ಸಿದ್ದರಾಮಯ್ಯ ಮತ್ತು ನನ್ನ ನಡುವೆ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಇದೆಯೇ ಹೊರತು ವೈಯಕ್ತಿಕವಾಗಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.