ಬೆಂಗಳೂರು: ಗ್ರಾಮಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ. ತಪ್ಪು ಮಾಹಿತಿ ನೀಡುವ ಮೂಲಕ ಕೋರ್ಟ್‌ಗೆ ವಂಚನೆ ಮಾಡಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಾರ್ಚ್ 17ರಂದು ಖುದ್ದು ಹಾಜರಾಗಬೇಕು ಎಂದು ನಾಲ್ಕು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಠಿಣವಾಗಿ ಆದೇಶಿಸಿದೆ. ಅಲ್ಲದೆ, ಅಧಿಕಾರಿಗಳ ನಡೆಯನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಪೀಠ, ನ್ಯಾಯಾಲಯಕ್ಕೆ ಅಧಿಕಾರಿಗಳೇ ಸುಳ್ಳು ಹೇಳಿದರೆ ಅವರನ್ನು ನಂಬುವುದು ಹೇಗೆ? ಇದು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ.
ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾ. ಟಿ ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ನ್ಯಾಯಾಂಗ ನಿಂದನೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟಿಗೆ ಸಲ್ಲಿಸಿದ್ದರು.
ಇದನ್ನು ಓದಿ: ಸಾರ್ವಜನಿಕ ಸ್ಮಶಾನಗಳನ್ನು ಒದಗಿಸಲು ಆಗ್ರಹ
ನ್ಯಾಯಾಲಯದ ಆದೇಶಕ್ಕೆ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಹಾಗಾಗಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಡಿಸಿ ಮುಂದಿನ ಕ್ರಮ ಕೈಕೊಳ್ಳಬೇಕಾಗುತ್ತದೆ ಎಂದು ನ್ಯಾಯಮೂರ್ತಿಗಳು ತರಾಟೆಗೆ ತೆಗೆದುಕೊಂಡರು.
ಆರಂಭಿಕವಾಗಿ 2023ರ ಜನವರಿ 10ರಂದು ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವರದಿ ಸಲ್ಲಿಸಿ ರಾಜ್ಯದ ಒಟ್ಟು 29,616 ಗ್ರಾಮಗಳ ಪೈಕಿ ಈವರೆಗೆ 27,903 ಗ್ರಾಮಗಳಿಗೆ ಸ್ಮಶಾನಕ್ಕೆ ಜಮೀನು ಒದಗಿಸಲಾಗಿದೆ. 319 ಗ್ರಾಮಗಳಿಗೆ ಸ್ಮಶಾನ ಸೌಲಭ್ಯ ಒದಗಿಸಬೇಕಾಗಿದೆ. 56 ಗ್ರಾಮಗಳಲ್ಲಿ ಆಗಿರುವ ಸ್ಮಶಾನ ಜಾಗದ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಒಟ್ಟು 1394 ಗ್ರಾಮಗಳು ಜನ ವಸತಿ ಇಲ್ಲದ ಗ್ರಾಮಗಳಾಗಿವೆ ಎಂದು ಮಾಹಿತಿ ನೀಡಿದರು.
ಇದನ್ನು ಓದಿ: 5000 ಕ್ಕಿಂತಲೂ ಹೆಚ್ಚು ಅನಾಥ ಶವಗಳ ಸಂಸ್ಕಾರ ಮಾಡಿರುವ ಆಶಾ
ಅಂದಿನ ವಿಚಾರಣೆ ಸಮಯದಲ್ಲಿ ನ್ಯಾಯಪೀಠ ಸೂಚನೆ ಮೇರೆಗೆ ಮಾಹಿತಿಯ ವಾಸ್ತವಾಂಶ ಪರಿಶೀಲಿಸಿದ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರವು, ಸರ್ಕಾರ ತಪ್ಪು ಮಾಹಿತಿ ನೀಡಿದೆ. ಇನ್ನೂ 2041 ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗ ಕೊಟ್ಟಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು , ಜಿಲ್ಲಾಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಒಪ್ಪಿಕೊಂಡರು. ಇದರಿಂದ ಅಸಮಾಧಾನಗೊಂಡ ನ್ಯಾಯಪೀಠವು ಮುಂದಿನ ವಿಚಾರಣೆ ವೇಳೆ ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳು ಖುದ್ದು ಹಾಜರಿರಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.
2019ರ ಆಕ್ಟೋಬರ್ 20ರ ಸಂದರ್ಭದಲ್ಲಿ ಒಟ್ಟಾರೆ 1077 ಎಕರೆ ಸ್ಮಶಾನ ಜಾಗ ಒತ್ತುವರಿಯಾಗಿದ್ದು, ಅದನ್ನು ತೆರವುಗೊಳಿಸಬೇಕು. ರಾಜ್ಯದಲ್ಲಿ ಸ್ಮಶಾನಕ್ಕೆ ಭೂಮಿ ಹೊಂದಿರದ ಗ್ರಾಮಗಳಿಗೆ ಆರು ತಿಂಗಳ ಒಳಗೆ ಅಗತ್ಯ ಜಾಗ ಒದಗಿಸಬೇಕು. ರಾಜ್ಯದ ಎಲ್ಲಾ ಗ್ರಾಮಗಳಲ್ಲೂ ಸ್ಮಶಾನಕ್ಕೆ ಜಾಗ ಇರುವುದನ್ನು ಸರ್ಕಾರ ಖಾತರಿಪಡಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ದುರದೃಷ್ಟಕರ ಸಂಗತಿ ಎಂದರೆ ಹೈಕೋರ್ಟ್ ಆದೇಶ ಪ್ರಕಟಗೊಂಡು ಮೂರೂವರೆ ವರ್ಷ ಕಳೆದಿದ್ದರೂ, ಸ್ಮಶಾನಕ್ಕೆ ಜಾಗ ಒದಗಿಸಲು ಈಗಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ