ಬೆಂಗಳೂರು : ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಪ್ರತಿನಿಧಿಗಳೊಂದಿಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದಿರುವ ಕ್ರಮವನ್ನು ಭಾರತದ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ.
ಈ ಕುರಿತು ಜಂಟಿ ಪ್ರಕಟಣೆ ನೀಡಿರುವ ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಲವಿತ್ರ ವಸ್ತ್ರದ ಹಾಗೂ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಕಳೆದ 20 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹದ ವಿರುದ್ಧ ಸರ್ಕಾರ ಕೈಗೊಂಡಿರುವ ಪೊಲೀಸ್ ಕ್ರಮವು ಪ್ರಜಾಪ್ರಭುತ್ವದ ಹಕ್ಕುಗಳು ಹಾಗೂ ಶಾಂತಿಯುತ ಪ್ರತಿಭಟನೆಯ ಸಂವಿಧಾನಬದ್ಧ ಹಕ್ಕಿನ ಮೇಲಿನ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.
ಸೋನಂ ವಾಂಗ್‌ಚುಕ್ ಅವರ ಬೇಡಿಕೆಗಳಿಗೆ ಬೆಂಬಲ ಸೂಚಿಸಿ ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಸಹ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. ಆದರೆ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಬದಲು ಕೇಂದ್ರ ಸರ್ಕಾರ ಪೊಲೀಸ್ ಬಲವನ್ನು ಬಳಸಿಕೊಂಡು ಹೋರಾಟವನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಅವರು ಟೀಕಿಸಿದ್ದಾರೆ.
ಇದನ್ನೂ ಓದಿ : ಸೋನಂ ವಾಂಗ್‌ಚುಕ್ ಬೆಂಬಲಿಸಿ ಎಸ್‌ಎಫ್‌ಐ ನಾಯಕರ ಅನಿರ್ದಿಷ್ಟಾವಧಿ ಉಪವಾಸ ಆರಂಭ
ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆಯುವುದು ದೇಶದ ಪ್ರಜಾಪ್ರಭುತ್ವದ ಪರಂಪರೆಗೆ ಕಪ್ಪುಚುಕ್ಕೆಯಾಗಿದೆ. ಪ್ರಜಾಪ್ರಭುತ್ವಕ್ಕೆ ಬದ್ಧವಾಗಿರುವ ಸರ್ಕಾರವು ಸಂವಾದ ಮತ್ತು ಹೊಣೆಗಾರಿಕೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕೇ ಹೊರತು, ಬಲಪ್ರಯೋಗ ಮತ್ತು ಬೆದರಿಕೆಯ ಮೂಲಕ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಿನ್ನಾಭಿಪ್ರಾಯಗಳನ್ನು ಮಣಿಸಲು ಪೊಲೀಸ್ ಬಲವನ್ನು ನಿರಂತರವಾಗಿ ಬಳಸುತ್ತಿರುವುದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ದುರ್ಬಲಗೊಳಿಸುವ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಡಿವೈಎಫ್‌ಐ ಅಭಿಪ್ರಾಯಪಟ್ಟಿದೆ.
ಸೋನಂ ವಾಂಗ್‌ಚುಕ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಪ್ರತಿಭಟನಾಕಾರರೊಂದಿಗೆ ಅರ್ಥಪೂರ್ಣ ಸಂವಾದ ನಡೆಸಿ ಅವರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.
ಪ್ರಜಾಪ್ರಭುತ್ವದ ಧ್ವನಿಗಳನ್ನು ಬಲಪ್ರಯೋಗದಿಂದ ಮೌನಗೊಳಿಸಲು ಸಾಧ್ಯವಿಲ್ಲ. ಶಾಂತಿಯುತ ಪ್ರತಿಭಟನೆಯ ಹಕ್ಕು ಜೀವಂತ ಪ್ರಜಾಪ್ರಭುತ್ವದ ಮೂಲಭೂತ ಅಂಶವಾಗಿದೆ. ಕೇಂದ್ರ ಸರ್ಕಾರ ದಮನಕಾರಿ ಧೋರಣೆಯನ್ನು ಮುಂದುವರಿಸಿದರೆ ದೇಶವ್ಯಾಪಿ ತೀವ್ರ ಹೋರಾಟಗಳನ್ನು ಸಂಘಟಿಸಲಾಗುವುದು ಎಂದು ಲವಿತ್ರ ವಸ್ತ್ರದ ಮತ್ತು ಬಸವರಾಜ ಪೂಜಾರ ಎಚ್ಚರಿಸಿದ್ದಾರೆ.
ಇದನ್ನೂ ನೋಡಿ : ಅಭಿಜಿತ್ ದೀಪ್ಕೆ ಮೇಲೆ ಮಸಿ ಎರಚಾಟ; “ನೀಲಿ ನನ್ನ ಬಣ್ಣ… ಜೈ ಭೀಮ್!” ಎಂದು ಪ್ರತಿಕ್ರಿಯೆ Janashakthi Media
