ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿನ ಅಕ್ರಮಗಳನ್ನು ತಡೆದು ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕೆಂದು ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಕಳೆದ 21 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಶನಿವಾರ ಬೆಳಿಗ್ಗೆ ದೆಹಲಿ ಪೊಲೀಸರು ಸಫ್ದರ್‌ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸೋನಂ
ವಾಂಗ್‌ಚುಕ್ ಅವರನ್ನು ಅವರ ಒಪ್ಪಿಗೆಯಿಲ್ಲದೆ ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ಕರೆದೊಯ್ಯಲಾಗಿದೆ ಎಂದು ಹೋರಾಟಗಾರರು ಹಾಗೂ ಬೆಂಬಲಿಗರು ಆರೋಪಿಸಿದ್ದಾರೆ. ಶಾಂತಿಯುತ ಪ್ರತಿಭಟನೆಯನ್ನು ದೆಹಲಿ ಪೊಲೀಸರ ಮೂಲಕ ಹತ್ತಿಕ್ಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವಿಪಕ್ಷಗಳು ಟೀಕಿಸಿವೆ.
ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ, “ಅವರಿಗೆ ಚಿಕಿತ್ಸೆ ನೀಡುವ ಮೊದಲು ಅವರ ಸಮ್ಮತಿ ಪಡೆಯಬೇಕಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವೇ ಇರಲಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.
ದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್ ಗೋಲ್ಚಾ ಅವರ ಬದಲಿಗೆ ಅನುರಾಗ್ ಕುಮಾರ್ ಅಧಿಕಾರ ವಹಿಸಿಕೊಂಡ ಮರುದಿನವೇ ಈ ಕ್ರಮ ಕೈಗೊಳ್ಳಲಾಗಿದೆ. ಮಫ್ತಿ ಉಡುಪಿನಲ್ಲಿದ್ದ ಪೊಲೀಸರು ವಾಂಗ್‌ಚುಕ್ ಅವರ ಸುತ್ತ ಬಿಳಿ ಬಟ್ಟೆಯನ್ನು ಅಡ್ಡಹಿಡಿದು, ಮಾಧ್ಯಮಗಳ ಕಣ್ಣಿಗೆ ಬೀಳದಂತೆ ಒತ್ತಾಯಪೂರ್ವಕವಾಗಿ ಆಂಬುಲೆನ್ಸ್‌ಗೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಜುಲೈ 20ರಂದು ನಡೆಯಲಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಸೋನಂ
ಇದನ್ನೂ ಓದಿ: ಕರಾವಳಿ, ಮಲೆನಾಡಿಗೆ ನಾಳೆ ಭಾರೀ ಮಳೆ: ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ವಾಂಗ್ಚುಕ್ ಶುಕ್ರವಾರ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ, ತಮ್ಮ ಆರೋಗ್ಯ ಹದಗೆಟ್ಟಿದ್ದರೂ ಉಪವಾಸ ಮುಂದುವರಿಸುವ ನಿರ್ಧಾರವನ್ನು ಪುನರುಚ್ಚರಿಸಿದ್ದರು. “ನಾನು ನನ್ನ ದೇಹದ 20 ಶೇಕಡಾವನ್ನು ಕಳೆದುಕೊಂಡಿದ್ದೇನೆ. ಯುವಜನರ ಧ್ವನಿಯನ್ನು ಸರ್ಕಾರ ಕೇಳಬೇಕಾಗಿದೆ,” ಎಂದು ಮನವಿ ಮಾಡಿದ್ದರು.
ಮತ್ತೊಂದೆಡೆ, ವಾಂಗ್‌ಚುಕ್ ಅವರ ಬೆಂಬಲಿಗರು ಹಾಗೂ ಪ್ರತಿಭಟನಾ ಸಂಘಟನೆಯ ನಾಯಕರು ಜುಲೈ 20ರಂದು ಸಂಸತ್‌ವರೆಗೆ ಮೆರವಣಿಗೆ ನಡೆಸುವ ತಮ್ಮ ನಿರ್ಧಾರವನ್ನು ಪುನರುಚ್ಚರಿಸಿದ್ದು, ಹೋರಾಟವನ್ನು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, “ದೆಹಲಿ ಪೊಲೀಸರು ಸೋನಂ ವಾಂಗ್‌ಚುಕ್ ಮತ್ತು ಅಭಿಜೀತ್ ದೀಪ್ಕೆ ಅವರನ್ನು ಬಂಧಿಸಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣವಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿರುವ ವ್ಯವಸ್ಥೆಯನ್ನು ಕಿತ್ತೊಗೆಯುವ ಬದಲು ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವುದು ಮೋದಿ ಸರ್ಕಾರದ ಸರ್ವಾಧಿಕಾರಿ ಮನೋಭಾವವನ್ನು ಬಯಲಿಗೆಳೆಯುತ್ತದೆ” ಎಂದು ಆರೋಪಿಸಿದ್ದಾರೆ.
“ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವವರ ಬಾಯಿ ಮುಚ್ಚಿಸುವುದೇ ಆಡಳಿತಗಾರರ ಪ್ರವೃತ್ತಿಯಾಗಿದೆ. ಕರ್ನಾಟಕದಲ್ಲಿಯೂ ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ ನಡೆಸುತ್ತಿರುವವರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿರುವುದನ್ನು ನೋಡಿದರೆ, ಜನಪರ ಹೋರಾಟಗಳನ್ನು ಹತ್ತಿಕ್ಕುವ ಮನೋಭಾವವೇ ಆಡಳಿತಗಾರರಲ್ಲಿ ಮನೆ ಮಾಡಿದೆ ಎಂಬುದು ಸ್ಪಷ್ಟವಾಗುತ್ತದೆ” ಎಂದು ವಿವಿಧ ಜನಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ವಾಂಗ್‌ಚುಕ್ ಅವರನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಿರುವ ಹಿನ್ನೆಲೆಯಲ್ಲಿ, ಜುಲೈ 20ರಂದು ರಾಷ್ಟ್ರವ್ಯಾಪಿ ನಡೆಯಲಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಇದನ್ನೂ ನೋಡಿ: ಪಂಚಮ’ ಪತ್ರಿಕೆ ಆರ್ಥಿಕ ಸಂಕಷ್ಟದಿಂದಲ್ಲ, ಚಳವಳಿಯೊಳಗಿನ ವಿಶ್ವಾಸದ ಕೊರತೆಯಿಂದ ಸ್ಥಗಿತ: ಎಚ್. ಗೋವಿಂದಯ್ಯ
