ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಜನರ ಪ್ರತಿಭಟನೆ ತೀವ್ರಗೊಂಡಿದ್ದು, ಅಧ್ಯಕ್ಷ ಗೋತಬಯ ರಾಜಪಕ್ಸ ನಿವಾಸಕ್ಕೆ ಜನರು ನುಗ್ಗಿ ದಾಂಧಲೆ ನಡೆಸಿದ್ದಾರೆ. ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಮನೆಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ.
ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ದಿನೇ ದಿನೇ ತೀವ್ರಗೊಳ್ಳುತ್ತಿದೆ.ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಿದ್ದರು. ಇದೀಗ ಪ್ರತಿಭಟನಾಕಾರರು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಈ ನಡುವೆ ಜನಾಕ್ರೋಶಕ್ಕೆ ಮಣಿದು ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಲ್ಲ ನಾಗರಿಕರ ಸುರಕ್ಷತೆ ಮತ್ತು ಸರ್ಕಾರ ಮುಂದುವರಿಯುವ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಸರ್ಕಾರಕ್ಕೆ ದಾರಿ ಮಾಡಿಕೊಡುವ ಉದ್ದೇಶದಿಂದ ಪಕ್ಷದ ನಾಯಕರ ಅತ್ಯುತ್ತಮ ಶಿಫಾರಸನ್ನು ನಾನು ಅಂಗೀಕರಿಸುತ್ತಿದ್ದೇನೆ.ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಜಯಸೂರ್ಯ ವಾಗ್ದಾಳಿ : ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆಯಲ್ಲಿ ಶ್ರೀಲಂಕಾ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಪಾಲ್ಗೊಂಡಿದ್ದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ರಾಜಪಕ್ಸೆ ವಿರುದ್ಧ ಧ್ವನಿ ಎತ್ತಿದ್ದು, ಹಾಲಿ ಆಂದೋಲನಕ್ಕೆ ಬೆಂಬಲ ನೀಡಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ದ್ವೀಪ ರಾಷ್ಟ್ರದಲ್ಲಿ ಜನರ ಆಕ್ರೋಶದ ಕಟ್ಟೆ ಒಡೆದಿದೆ. ನಿಮ್ಮ ಭದ್ರ ಕೋಟೆ ಕುಸಿದಿದೆ, ಅಧ್ಯಕ್ಷ ಸ್ಥಾನಕ್ಕೆ ಗೊಟಬಯ ರಾಜೀನಾಮೆ ನೀಡುವ ಘನತೆ ತೋರಿಸಿ ಎಂದು ಆಗ್ರಹಿಸಿದ್ದಾರೆ.
ಇತ್ತ ಆರ್ಥಿಕ ಬಿಕ್ಕಟ್ಟು ಒಂದೆಡೆಯಾದರೆ ರಾಜಕೀಯ ಅಸ್ಥಿರತೆಯಿಂದಲೂ ಕಂಗಾಲಾಗಿರುವ ಶ್ರೀಲಂಕಾ 3 ಬಿಲಿಯನ್ ಡಾಲರ್ ವಿದೇಶಿ ಸಾಲವನ್ನು ಕೇಳಿದೆ. ಆದರೆ ಸದ್ಯದ ಪರಿಸ್ಥಿತಿ ಅವಲೋಕಿಸಿದರೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯೊಂದಿಗಿನ ಮಾತುಕತೆ ಫಲಪ್ರದವಾಗುವುದು ಕೂಡ ಅನುಮಾನವಿದೆ ಎಂದು ವಿಶ್ಲೇಷಿಸಲಾಗಿದೆ.