ಮನುವಾದದ ವಿರುದ್ಧ ಐಕ್ಯ ಹೋರಾಟ ಅಗತ್ಯ – ಸುಭಾಷಿಣಿ ಅಲಿ

ಬೆಂಗಳೂರು: ದೇಶದಲ್ಲಿ ಬೇರು ಬಿಟ್ಟಿರುವ ಮನುವಾದವನ್ನು ಹೋಗಲಾಡಿಸಲು ದಲಿತ, ಕಾರ್ಮಿಕ, ಮಹಿಳಾ ಸಂಘಟನೆಗಳು ಒಂದು ವೇದಿಕೆಯಲ್ಲಿ ಒಗ್ಗೂಡಿ ಐಕ್ಯ ಹೋರಾಟ ರೂಪಿಸಬೇಕು. ಯಾವುದೇ ರೀತಿಯ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮನುವಾದವನ್ನು ಸೋಲಿಸುವ ನಿಟ್ಟಿನಲ್ಲಿ ಜೊತೆಯಾಗಿ ಸಾಗಬೇಕು. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜನಪರ ಸಂಘಟನೆಗಳು ಒಟ್ಟಾಗಿ ಬಿಜೆಪಿ ಸೋಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದು ದಲಿತ ಶೋಷಣೆ ಮುಕ್ತಿ ಮಂಚ್‍ನ ರಾಷ್ಟ್ರೀಯ ಉಪಾಧ್ಯಕ್ಷೆ ಸುಭಾಷಿಣಿ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಗಾಂಧಿ ಭವನದಲ್ಲಿ ದಲಿತ ಹಕ್ಕುಗಳ ಸಮಿತಿ ಹಾಗೂ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘಟನೆ ವತಿಯಿಂದ ಆಯೋಜಿಸಿದ್ದ ‘ದಲಿತರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಮತ್ತು ಅವರ ಹಕ್ಕುಗಳಿಗಾಗಿ ಒತ್ತಾಯಿಸಿ’ ಎಂಬ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಬಿಜೆಪಿ ಸರಕಾರ ಮಾಡುತ್ತಿರುವ ಅನಾಚಾರಗಳ ಬಗ್ಗೆ ಮಾಧ್ಯಮಗಳು ಬಹಿರಂಗ ಪಡಿಸುವುದಿಲ್ಲ. ಹಾಗಾಗಿ ಸರಕಾರದ ಜನವಿರೋಧಿ ನೀತಿಗಳ ಕುರಿತು ಸಾರ್ವಜನಿಕರ ನಡುವೆ ಚರ್ಚೆ ಆಗುತ್ತಿಲ್ಲ’ , ಇದನ್ನು ಸರಿಪಡಿಸಲು ಸಂಘಟನೆಗಳು ಸಾರ್ವಜನಿಕರ ನಡುವೆ ಸರಕಾರದ ನೀತಿಗಳ ಬಗ್ಗೆ ಚರ್ಚಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿʻಒಳ ಮೀಸಲಾತಿʼ ಮತ್ತು ದಲಿತರು: ಸಾಧಕ ಬಾಧಕಗಳು

ರಾಜ್ಯದಲ್ಲಿರುವ ಬಿಜೆಪಿ ಸರಕಾರವು ದಲಿತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತಗಳನ್ನು ರದ್ದುಪಡಿಸುವಂತಹ ಅಪಾಯಕಾರಿ ಕೃತ್ಯಕ್ಕೆ ಕೈ ಹಾಕಿದೆ. ಈ ಮೂಲಕ ಬಿಜೆಪಿ ಸಂವಿಧಾನಗಳ ಮೌಲ್ಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿ ದಲಿತ, ಮುಸ್ಲಿಮ್ ಹಾಗೂ ಶೋಷಿತರಿಗೆ ಆಮಿಷ, ದೌರ್ಜನ್ಯ, ಹಲ್ಲೆಗಳನ್ನು ನಡೆಸಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು. ನಗರದಲ್ಲಿ ಸುಮಾರು 36 ಸಾವಿರ ದಲಿತ ಹಾಗೂ ಮಸ್ಲಿಮ್ ಸಮುದಾಯದ ಮತಗಳನ್ನು ರದ್ದು ಕಾರ್ಯಕ್ಕೆ ಬಿಜೆಪಿ ಮುಂದಾಗಿದ್ದು, ಜನತೆಯ ಮೂಲಭೂತ ಹಕ್ಕುಗಳನ್ನು ಒಂದೊಂದಾಗಿ ಕಸಿಯುತ್ತಾ ಬರುತ್ತಿದೆ. ಇದರ ವಿರುದ್ಧ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯುವಂತಹ ಪ್ರತಿಯೊಬ್ಬ ನಾಗರಿಕರು ಬೀದಿಗಿಳಿದು ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಹಿಂದಿನ ವರ್ಷದ ಉತ್ತರ ಪ್ರದೇಶ ಚುನಾವಣೆಯ ಸಂದರ್ಭದಲ್ಲಿ, ಭದ್ರತಾ ಸಿಬ್ಬಂದಿಗಳನ್ನು ಬಳಸಿಕೊಂಡು ನಿರ್ಧಿಷ್ಟವಾಗಿ ಮುಸ್ಲಿಮ್ ಮತದಾರರಿಗೆ ತಪಾಸಣೆ ನೆಪದಲ್ಲಿ ಭಯಪಡಿಸಲಾಯಿತು. ಅದರ ಮುಂದುವರೆದ ಭಾಗವಾಗಿ ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದಲೇ ಮುಸ್ಲಿಮ್ ಹಾಗೂ ದಲಿತ ಮತದಾರರನ್ನು ಇಲ್ಲವಾಗಿಸುವ ಕೃತ್ಯಕ್ಕೆ ಇಳಿದಿರುವುದರ ಬಗ್ಗೆ ಪ್ರಜ್ಞಾವಂತ ನಾಗರಿಕರು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಅವರು ತಿಳಿಸಿದರು.  ಎಂದು ಅವರು ಕರೆ ನೀಡಿದರು.

ದಲಿತ ಹಕ್ಕುಗಳ ಸಮಿತಿಯ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶೇ.98 ದಲಿತರ ಮೇಲಿನ ಹಲ್ಲೆ ಪ್ರಕರಣಗಳು ಪೊಲೀಸ್ ಸ್ಟೇಷನ್‍ನಲ್ಲೇ ಇತ್ಯಾರ್ಥಿಗೊಂಡು ಆರೋಪಿಗಳು ಕಾನೂನು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದು ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿದೆ. ದಲಿತರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಮತ್ತು ದಲಿತರ ಹಕ್ಕುಗಳಿಗಾಗಿ ಒತ್ತಾಯಿಸಿ ಮಾ.14ರಂದು ನಗರದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು. ಈ ನಿಟ್ಟನಲ್ಲಿ ರಾಜ್ಯಾದ್ಯಂತ ದಲಿತರ ಮೇಲಿನ ದೌರ್ಜನ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಮಾವೇಶದಲ್ಲಿ ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಬಾಲಸುಂದರಂ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನಿತ್ಯಾನಂದ ಸ್ವಾಮಿ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಡಾ.ಮೋಹನ್‍ರಾಜ್, ಎಸ್ಸಿ, ಎಸ್ಟಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಡಿ.ಶಿವಶಂಕರ್, ಮತ್ತಿತರರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *