ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಜುಲೈ 18ರಂದು ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದೇ ವೇಳೆ ಕೊಡಗು, ಹಾಸನ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೆಂಗಳೂರು ನಗರ ಸೇರಿದಂತೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯೊಂದಿಗೆ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಹಸಿರು ನಿಶಾನೆ
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಜುಲೈ 20ರವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಹಾಗೂ ಜನರು ಅನಗತ್ಯವಾಗಿ ಪ್ರವಾಹಪೀಡಿತ ಅಥವಾ ಗುಡ್ಡ ಪ್ರದೇಶಗಳಿಗೆ ತೆರಳದಂತೆ ಸಲಹೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ನೋಡಿ : “19ನೇ ದಿನಕ್ಕೆ ಸೋನಮ್ ವಾಂಗ್ಚುಕ್ ಉಪವಾಸ – ಕೇಂದ್ರಕ್ಕೆ ಎಚ್ಚರಿಕೆಯ ಗಂಟೆ | ಗುರುರಾಜ ದೇಸಾಯಿ
