ಶಿಮ್ಲಾ: ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಶನಿವಾರ ಅವರ ಹೆಸರನ್ನು ಅನುಮೋದಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಸುಖ್ವಿಂದರ್ ಸಿಂಗ್ ಸುಖು ಅವರು ನಾಳೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಇದನ್ನೂ ಓದಿ : ಮೂರು ಚುನಾವಣೆ : ಗೆದ್ದದ್ದು ಒಂದು! ಕಳೆದುಕೊಂಡಿದ್ದು ಎರಡು !!
ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಪ್ರಭಾವಿ ನಾಯಕರಲ್ಲಿ ಒಬ್ಬರು. ಅವರು ವೃತ್ತಿಯಿಂದ ವಕೀಲರು. ಕಾಂಗ್ರೆಸ್‌ನ ವಿದ್ಯಾರ್ಥಿ ನಾಯಕರಾಗಿ ಹೆಸರು ಮಾಡಿದವರು. 58 ವರ್ಷ ವಯಸ್ಸಿನ ನಾಯಕರಾದ ಸುಖು ಸ್ಥಳೀಯರು ಮತ್ತು ಪಕ್ಷದ ಕಾರ್ಯಕರ್ತರಿಂದ ಅಪಾರ ಬೆಂಬಲವನ್ನು ಹೊಂದಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಹಿಮಾಚಲ ಪ್ರದೇಶದ ಸಿಎಂ ರೇಸ್‌ನಲ್ಲಿ ಒಟ್ಟು ಮೂವರು ಇದ್ದರು. ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿ ರೇಸ್ ನಲ್ಲಿದ್ದರು. ಪ್ರಮುಖವಾಗಿ ಪ್ರತಿಭಾ ಸಿಂಗ್ ಅವರು ಸಿಎಂ ಸ್ಥಾನದ ಬೇಡಿಕೆ ಇಟ್ಟಿದ್ದರು. ಪ್ರತಿಭಾ ಸಿಂಗ್ ಅವರು ಪ್ರಭಾವಿ ನಾಯಕಿಯಾಗಿದ್ದಾರೆ. ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಧರ್ಮಪತ್ನಿಯೂ ಆಗಿರುವ ಅವರು, ಮೂರು ಬಾರಿ ಕಾಂಗ್ರೆಸ್ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಈಗ ಹಿಮಾಚಲ ಪ್ರದೇಶದ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆಯು ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಒಟ್ಟು 68 ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ಕೇವಲ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನೂ ಮೂರು ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ಪಡೆದುಕೊಂಡಿದ್ದಾರೆ.