ನವದೆಹಲಿ : ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದತಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ನ್ಯಾಯಾಲಯದ ಆದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಸುಮಾರು ಮೂರು ದಶಕಗಳಷ್ಟು ಹಿಂದಿನ ಶೇ 4ರ ಮೀಸಲಾತಿಯನ್ನು ರದ್ದುಗೊಳಿಸಿದ ಕರ್ನಾಟಕದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ವಿವಾದಾತ್ಮಕ ನಿರ್ಧಾರದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿ, ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದೆ.
ಮುಸ್ಲಿಮರ ಶೇ 4ರ ಒಬಿಸಿ ಕೋಟಾವನ್ನು ರದ್ದುಪಡಿಸಿ, ಒಕ್ಕಲಿಗರು ಹಾಗೂ ಲಿಂಗಾಯತರ ಮೀಸಲಾತಿಯನ್ನು ತಲಾ ಶೇ 2ರಷ್ಟು ಹೆಚ್ಚಿಸುವ ನಿರ್ಧಾರವು ಮೇಲ್ನೋಟಕ್ಕೆ ಅಸ್ಥಿರ ಹಾಗೂ ದೋಷಪೂರಿತ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.
ಇದನ್ನೂ ಓದಿ : ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದು ದೋಷಪೂರಿತ : ಸುಪ್ರೀಂ
ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಮೀಸಲಾತಿ ಪರಿಷ್ಕರಣೆ ವೇಳೆ ಮುಸ್ಲಿಮರಿಗೆ ರಾಜ್ಯ ಸರ್ಕಾರ ಶೇ. 4ರ ಮೀಸಲಾತಿ ರದ್ದು ಮಾಡಿತ್ತು. ಸರ್ಕಾರದ ಈ ಆದೇಶ ಸಾಮಾಜಿಕ ವಲಯದಲ್ಲಿ ಹೆಚ್ಚು ಚರ್ಚೆಗೀಡಾಗಿತ್ತು.
ಇದೀಗ ಸುಪ್ರೀಂಕೋರ್ಟ್ ಸರ್ಕಾರದ ಆದೇಶಕ್ಕೆ `ಬ್ರೇಕ್’ ಹಾಕಿದೆ. ಸುಪ್ರೀಂಕೋರ್ಟ್ ಆದೇಶದಿಂದಾಗಿ ಈಗ ಒಕ್ಕಲಿಗ ಮತ್ತು ಲಿಂಗಾಯತ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳಲಿದೆ.