ನವದೆಹಲಿ: ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಬಗ್ಗೆ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿ ತನಿಖೆ ಕೈಗೊಳ್ಳಲು ಮಹತ್ವದ ಆದೇಶ ಹೊರಡಿಸಿದೆ.
“ತಜ್ಞರ ಸಮಿತಿ ರಚನೆಗೆ ಸಂಬಂಧಿಸಿದ ಕೇಂದ್ರ ಸರ್ಕಾರ ಸಲ್ಲಿಸಿದ ಮನವಿಯನ್ನು ನ್ಯಾಯಪೀಠ ತಿರಸ್ಕರಿದೆ. ಅಲ್ಲದೇ, ಸ್ವತಂತ್ರ ಸದಸ್ಯರನ್ನು ನೇಮಿಸುವುದು ಕಷ್ಟಸಾಧ್ಯವಾದ ಕೆಲಸವಾಗಿತ್ತು. ಸುಪ್ರೀಂ ಕೋರ್ಟ್ ನಿಗಾವಣೆಯಲ್ಲಿ ತಜ್ಞರ ಸಮಿತಿ ಕಾರ್ಯಾಚರಣೆ ನಡೆಸಲಿದೆ” ಎಂದು ನ್ಯಾಯಾಲಯ ತಿಳಿಸಿದೆ.
ಇದನ್ನು ಓದಿ: ಪೆಗಾಸಸ್ ಆರೋಪಗಳಲ್ಲಿ ಸತ್ಯಾಂಶವಿದ್ದರೇ, ಅದು ಗಂಭೀರವಾದದ್ದೇ: ಸುಪ್ರೀಂ ಕೋರ್ಟ್
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠದ ಆದೇಶದ ಪ್ರಕಾರ ಸಮಿತಿಯಲ್ಲಿ 1976ನೇ ಶ್ರೇಣಿಯ ನಿವೃತ್ತ ಐಪಿಎಸ್ ಅಧಿಕಾರಿ ಅಲೋಕ್ ಜೋಷಿ, ಇಂಟರ್‌ನ್ಯಾಷನಲ್ ಆರ್ಗನೈಸೇಷನ್ ಆಫ್ ಸ್ಟಾಂಡರ್ಡೈಸೇಷನ್/ಇಂಟರ್‌ನ್ಯಾಷನಲ್ ಎಲೆಕ್ಟ್ರೊ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಉಪ ಸಮಿತಿಯ ಅಧ್ಯಕ್ಷ ಡಾ. ಸಂದೀಪ್ ಓಬೆರಾಯ್ ಸಮಿತಿಯ ಇತರೆ ಸದಸ್ಯರಾಗಿದ್ದಾರೆ ಎಂದು ಉಲ್ಲೇಖಿಸಿದೆ.
ಸುಪ್ರೀಂ ಕೋರ್ಟ್ ನಿರ್ಧಾರದಿಂದಾಗಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಇದರ ವಿರುದ್ಧದ ಅರ್ಜಿ ತಿರಸ್ಕರಿಸಬೇಕೆಂಬ ಕೇಂದ್ರದ ವಾದ ಒಪ್ಪಲ್ಲ. ಸಮಿತಿ ರಚಿಸುವ ಮನವಿಗೆ ಒಪ್ಪಿಗೆ ಕೊಟ್ಟಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನು ಓದಿ: ಪೆಗಾಸಸ್ ಬಗೆಗಿನ ಆರೋಪ ಆಧಾರರಹಿತ-ತನಿಖೆಗೆ ತಜ್ಞರ ಸಮಿತಿ ರಚನೆ: ಸುಪ್ರೀಂಗೆ ಕೇಂದ್ರದ ಮಾಹಿತಿ
ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣದಲ್ಲಿ ಕಾನೂನು ಎತ್ತಿ ಹಿಡಿಯುವುದೇ ನಮ್ಮ ಉದ್ದೇಶವೆಂದಿರುವ ಸುಪ್ರೀಂ ಕೋರ್ಟ್ ಈ ಪ್ರಕರಣ ಆಧುನಿಕ ತಂತ್ರಜ್ಞಾನ ಬಳಕೆಗೆ ಸಂಬಂಧಿಸಿದೆ. ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ‘ಸುಪ್ರೀಂ’ ಪರಿಶೀಲಿಸಿದೆ. ಸಾಂವಿಧಾನಿಕ ಮೌಲ್ಯ ಎತ್ತಿ ಹಿಡಿಯಲು ನಮ್ಮ ಶ್ರಮ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಆದೇಶಿಸಿದ್ದಾರೆ.
ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ವಕೀಲರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಸಾಂವಿಧಾನಿಕ ಹುದ್ದೆಗಳಲ್ಲಿರುವವರ ಮೇಲೆ ನಿಗಾ ಇಡಲು ಭಾರತ ಸರ್ಕಾರ ಸೇರಿದಂತೆ ಜಗತ್ತಿನಾದ್ಯಂತ ವಿವಿಧ ಸರ್ಕಾರಗಳು ಪೆಗಸಸ್ ತಂತ್ರಾಂಶದ ನೆರವು ಪಡೆದಿವೆ ಎಂದು ಭಾರತದ ʼದಿ ವೈರ್ʼ ಸೇರಿದಂತೆ ವಿಶ್ವದ ಹದಿನಾರು ಅಂತಾರಾಷ್ಟ್ರೀಯ ಮಾಧ್ಯಮ ಸಂಸ್ಥೆಗಳ ಒಕ್ಕೂಟ ತನಿಖಾ ವರದಿ ಪ್ರಕಟಿಸಿದ್ದವು.