ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ರದ್ದು, ಶರಣಾಗಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಇಂದು(ಏಪ್ರಿಲ್‌ 18) ರದ್ದುಪಡಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾ ಲಖೀಂಪುರ ಖೇರಿ ಗಲಭೆ ಪ್ರಕರಣದ ಪ್ರಮುಖ ಆರೋಪಿ. ಆಶಿಷ್‌ ಮಿಶ್ರಾಗೆ ಜಾಮೀನು ನೀಡಿರುವುದನ್ನು ಲಖೀಂಪುರ ಖೇರಿ ಗಲಭೆಯಲ್ಲಿ ಮೃತಪಟ್ಟ ರೈತರ ಕುಟುಂಬದವರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

ಇದನ್ನು ಓದಿ: ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠವು  ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ಹೈಕೋರ್ಟ್ ಅನಗತ್ಯ ಅಂಶಗಳನ್ನು ಪರಿಗಣಿಸಿದೆ ಎಂದಿದ್ದು, ಆಶಿಷ್ ಮಿಶ್ರಾ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಒಂದು ವಾರದೊಳಗೆ ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಆದೇಶಿಸಿದೆ.

ಜಾಮೀನು ರದ್ದುಗೊಳಿಸಬೇಕೆಂದು ರೈತರು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌  ತೀರ್ಪನ್ನು ಕಾಯ್ದಿರಿಸಿತ್ತು. ಅಲಹಾಬಾದ್ ಹೈಕೋರ್ಟ್‌ ಆಶಿಶ್‌ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ಗೆ ತಿಳಿಸಿದೆ.

ಇದನ್ನು ಓದಿ: ಲಖಿಂಪುರ ಖೇರಿಯಲ್ಲಿ ರೈತರ ಹತ್ಯೆ ಪೂರ್ವ ನಿಯೋಜಿತ ಸಂಚು: ಎಸ್‌ಐಟಿ

2021ರ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಗಲಭೆ ನಡೆದಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹತ್ತಿಸಲಾಗಿತ್ತು. ನಾಲ್ವರು ರೈತರು ಮೃತಪಟ್ಟಿದ್ದರು. ಆಶಿಷ್‌ ಮಿಶ್ರಾ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಲಖೀಂಪುರ ಖೇರಿ ಗಲಭೆ ಪ್ರಕರಣದ ಬಗ್ಗೆ ಮೊದಲು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದರು. ಬಳಿಕ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಯಿತು. ಸುಪ್ರೀಂಕೋರ್ಟ್‌ಗೆ ಸಹ ಈ ಕುರಿತು ಅರ್ಜಿ ಸಲ್ಲಿಕೆಯಾಗಿದೆ. ಗಲಭೆ ಬಗ್ಗೆ ತನಿಖೆ ಆರಂಭಿಸಿದ್ದ ಎಸ್‌ಐಟಿ ಜನವರಿ 3ರಂದು 5 ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿತ್ತು. ಇದರಲ್ಲಿ ಆಶಿಷ್ ಮಿಶ್ರಾ ಪ್ರಮುಖ ಆರೋಪಿ ಎಂದು ಉಲ್ಲೇಖ ಮಾಡಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *