- ಹಿಜಾಬ್ ಪ್ರಕರಣದಲ್ಲಿ ಇಬ್ಬರು ನ್ಯಾಯಮೂರ್ತಿಗಳ ಅಭಿಪ್ರಾಯ ಭಿನ್ನ
- ಪ್ರಕರಣ ಭಾರತದ ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗ
- 10 ದಿನಗಳ ವಿಚಾರಣೆ ಬಳಿಕ ತೀರ್ಪು ಕಾಯ್ದಿರಿಸಲಾಗಿತ್ತು
ನವದೆಹಲಿ: ಬಹುನಿರೀಕ್ಷಿತ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನ ನ್ಯಾಯಪೀಠ ಗುರುವಾರ ಒಮ್ಮತದ ತೀರ್ಮಾನಕ್ಕೆ ಬರಲಾಗದೆ ಪ್ರಕರಣ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಿದೆ.
ಮುಂದೆ ವಿಸ್ತ್ರೃತ ಪೀಠ ರಚನೆ ಮಾಡಲಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದ್ದಾರೆ.
ಇಂದು ಅಂತಿಮ ತೀರ್ಪು ಪ್ರಕಟವಾಗಬೇಕಿತ್ತು. ಸುಪ್ರೀಂ ಕೋರ್ಟ್ ನ ನ್ಯಾಯಪೀಠದಲ್ಲಿದ್ದ ಇಬ್ಬರು ನ್ಯಾಯಮೂರ್ತಿಗಳು ಹಿಜಾಬ್ ವಿವಾದ ಕುರಿತು ಭಿನ್ನ ತೀರ್ಪುಗಳನ್ನು ನೀಡಿರುವುದರಿಂದ ನಿರ್ದಿಷ್ಟ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ವಿಷಯವನ್ನು ಸೂಕ್ತ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಉಲ್ಲೇಖಿಸಲಾಗಿದೆ ಎಂದು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೇಳಿದ್ದಾರೆ.
ಇದನ್ನೂ ಓದಿ : ಇಂದು ‘ಹಿಜಾಬ್’ ತೀರ್ಪು, ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ: ಹಲವೆಡೆ ಕಟ್ಟೆಚ್ಚರ
ಸುಪ್ರೀಂ ಕೋರ್ಟ್‌ನ ಇಬ್ಬರೂ ನ್ಯಾಯಮೂರ್ತಿಗಳ ತೀರ್ಪು : ನ್ಯಾಯಾಲಯದಲ್ಲಿ, ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ತಮ್ಮ ತೀರ್ಪನ್ನು ಮೊದಲು ಓದಿದ್ದಾರೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸುತ್ತಿರುವುದಾಗಿ ಹೇಳಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ, ಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ರದ್ದುಗೊಳಿಸಿದ್ದಾರೆ. ಇದರೊಂದಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಸರ್ಕಾರದ ಆದೇಶವನ್ನೂ ತಿರಸ್ಕರಿಸಿದ್ದಾರೆ.